ಬೆಳಗಾವಿ:– ಡಿ.4ರಂದು ಸುವರ್ಣಸೌಧಕ್ಕೆ ರೈತರಿಂದ ಮುತ್ತಿಗೆ ಹಾಕಲಾಗುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವುದು ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಡಿ.4ರ ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ಸಾವಿರಾರು ರೈತರು ಪಾದಯಾತ್ರೆ ಮೂಲಕ ತೆರಳಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಜಾರಿಗೊಳಿಸಿ ಬಳಿಕ ಅದನ್ನು ವಾಪಸ್ ಪಡೆದಿದೆ. ಆದರೆ, ಹಿಂದಿನ ಬಿಜೆಪಿ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿತ್ತು. ಈ ವೇಳೆ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೇ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದರು. ಆದರೆ, ಈಗ ಕೃಷಿ ಕಾಯ್ದೆಯನ್ನು ವಾಪಸ್ ಪಡೆದಿಲ್ಲ. ರೈತರ ದಿಕ್ಕು ತಪ್ಪಿಸುವ ಹುನ್ನಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬೆಂಬಲಿಸಿದ್ದರು. ಕಳೆದ ಅಧಿವೇಶನದಲ್ಲಿ ಸಚಿವ ಶಿವಾನಂದ ಪಾಟೀಲ್ ಕೃಷಿ ಕಾಯ್ದೆ ವಾಪಸ್ ಪಡೆಯುವ ಬಿಲ್ ಮಂಡಿಸಲು ಮುಂದಾಗಿದ್ದರು. ಆಗ ವಿಪಕ್ಷದವರು ವಿರೋಧಿಸಿದ್ದರು. ಬಿಜೆಪಿಯವರು ಜಾರಿಗೆ ತಂದಿರುವ ಕೃಷಿ ಕಾಯ್ದೆ ಯಥಾವತ್ತಾಗಿ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಬಿಜೆಪಿ ಜಾರಿ ತಂದ ಭೂಸುಧಾರಣಾ ಕಾಯ್ದೆಯನ್ನ ಅನುಷ್ಠಾನಗೊಳಿಸುವ ಕೆಲಸವನ್ನು ಕಾಂಗ್ರೆಸ್ ಅಚ್ಚುಕಟ್ಟಾಗಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.