ಹಾಸನ: ರಾಜ್ಯದಲ್ಲಿ ಕೊರೊನಾ ಹೆಚ್ಚಾದ ಹಿನ್ನೆಲೆ ಈಗಾಗಲೇ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ಮಧ್ಯೆ ಹಾಸನದ 24 ಜನ ಪೊಲೀಸರಿಗೆ ಕೊರೊನಾ ದೃಢಪಟ್ಟಿದೆ. ಓರ್ವ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು 24 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಇಬ್ಬರಿಗೆ, ಟ್ರಾಫಿಕ್ ಪೊಲೀಸ್ ಠಾಣೆ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿರುವ ಪೊಲೀಸರಿಗೆ ಕೊರೊನಾ ಬಂದಿದೆ.
ಇವರಿಂದ ಕುಟುಂಬದ ಸದಸ್ಯರಿಗೂ ಬಂದಿರುವುದು ಎಂಬ ಆತಂಕ ಸೃಷ್ಟಿಯಾಗಿದೆ. ಎಸ್‍ಪಿ ಶ್ರೀನಿವಾಸ್ ಗೌಡರ ಸೂಚನೆಯಂತೆ ಕಳೆದ ಎರಡು ದಿನಗಳ ಹಿಂದೆ ಶುಕ್ರವಾರದಂದು ಎಲ್ಲಾ ಪೊಲೀಸರಿಗೂ ಕೋವಿಡ್ ಪರೀಕ್ಷೆ ಮಾಡಲಾಗಿದೆ. ರ್‍ಯಾಂಡಮ್ ಟೆಸ್ಟ್ ಮಾಡಿದ ಮೇಲೆ ಪಾಸಿಟಿವ್ ಇರುವುದು ಬೆಳಕಿಗೆ ಬಂದಿದೆ. ಈಗಾಗಲೇ ಪಾಸಿಟಿವ್ ಬಂದಿರುವ ಎಲ್ಲರನ್ನು ಹೋಮ್ ಕ್ವಾರಂಟೈನ್ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
