ಬೆಂಗಳೂರು:- ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಪ್ರಕರಣ ಕಡಿಮೆ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ʼನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿದೆ.
ಸಂಪೂರ್ಣವಾಗಿ ಅಪರಾಧ ನಿರ್ಮೂಲನೆ ಮಾಡಲಾಗದಿದ್ದರೂ, ಕಡಿಮೆಗೊಳಿಸಲು ಸಾಧ್ಯವಿದೆ. ತಡೆಯಲು ಸಾಧ್ಯವಿರುವ ಅಪರಾಧಗಳನ್ನು ತಡೆಗಟ್ಟಲು ಪೊಲೀಸರು ಹೆಚ್ಚಿನ ಆದ್ಯತೆ ನೀಡಬೇಕುʼ ಎಂದು ತಿಳಿಸಿದರು.
ನಗರದಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸಮಾಜದ ಒಳಿತಿಗಾಗಿ ಡ್ರಗ್ಸ್ ಮಾಫಿಯಾವನ್ನು ಮಟ್ಟಹಾಕುವ ಬಗ್ಗೆ ಎಲ್ಲ ಹಂತದ ಪೊಲೀಸ್ ಅಧಿಕಾರಿಗಳು ತೀರ್ಮಾನ ಕೈಗೊಂಡು ಅನುಷ್ಠಾನಗೊಳಿಸಬೇಕು. ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ಜೀವನ ಮಾಡುವವರನ್ನು ಗುರುತಿಸಿ, ಅವರ ರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಪೊಲೀಸ್ ಬೀಟ್ ವ್ಯವಸ್ಥೆ ಬಲಪಡಿಸಬೇಕು ಎಂದು ಸೂಚಿಸಿದರು.