ಬೆಂಗಳೂರು:– ಗುತ್ತಿಗೆದಾರರಿಗೆ ಹಣ ನೀಡದ ಸರ್ಕಾರಕ್ಕೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹೈಕೋರ್ಟ್ ಆದೇಶ ಪಾಲಿಸದ ಬಿಬಿಎಂಪಿ ಮತ್ತು ಸರ್ಕಾರದ ವಿರುದ್ಧ ಮೆಸರ್ಸ್ ನಿಕ್ಷೇಪ ಇನ್ಫ್ರಾ ಪ್ರಾಜೆಕ್ಟ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ನ್ಯಾ।ಪಿ.ಬಿ.ವರಾಳೆ ಹಾಗೂ ನ್ಯಾ। ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು.
ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಸರ್ಕಾರ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು? ಬಾಕಿ ಹಣ ಬಿಡುಗಡೆ ಮಾಡುವುದರಲ್ಲಿಯೇ ಹಿರಿತನವನ್ನು ಏಕೆ ಅನುಸರಿಸಬೇಕು? ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಲು ಬಿಡಬಾರದು ಎಂದು ಕಟುವಾಗಿ ನುಡಿದಿದೆ.
ಕೆಲವು ಕಾಮಗಾರಿಗಳಿಗೆ ಸ್ಥಳೀಯ ಸಂಸ್ಥೆ ಟೆಂಡರ್ ಕರೆದು, ಆ ಕಾಮಗಾರಿಗಳನ್ನು ಪೂರ್ಣಗೊಳಿಸಿದ ಬಳಿಕ ಹಣ ಪಾವತಿಗೆ ಷರತ್ತುಗಳನ್ನು ಒಡ್ಡುವುದು ಹಾಗೂ ಅನಗತ್ಯ ವಿಳಂಬ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಗುತ್ತಿಗೆದಾರರನ್ನು ಮೂಲೆಗುಂಪು ಮಾಡಿ ಬಾಕಿ ಪಾವತಿಗೆ ಬಿಬಿಎಂಪಿ ಹಾಗೂ ಸರ್ಕಾರ ಅನುಸರಿಸುತ್ತಿರುವ ವಿಧಾನವೇ ನ್ಯಾಯಾಲಯಕ್ಕೆ ತಿಳಿಯುತ್ತಿಲ್ಲ. ನಿಮ್ಮ ಬಳಿ ಹಣವಿಲ್ಲವೆ? ಹಣ ಇಲ್ಲವಾದರೆ ಹೇಳಿ ಬಿಡಿ. ಬಾಕಿ ಪಾವತಿಯಲ್ಲೂ ಹಿರಿತನ ಅನುಸರಿಸುವುದಕ್ಕೆ ನಿಮ್ಮ ಬಳಿ ಮಾರ್ಗಸೂಚಿ ಇದೆಯೇ? ಹಿರಿತನ ಏಕೆ ಎಂಬ ಬಗ್ಗೆ ಉತ್ತರಿಸಬೇಕು’ ಎಂದು ನ್ಯಾಯಪೀಠ ಪ್ರಶ್ನಿಸಿತು.
ಅರ್ಜಿದಾರರು ಗುತ್ತಿಗೆ ಪಡೆದ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಅವರು ಕೆಲಸವನ್ನು ಮಧ್ಯದಲ್ಲಿಯೇ ಕೈಬಿಟ್ಟಿದ್ದಾರೆ ಎಂದು ಹೇಳಲು ಯಾವುದೇ ದಾಖಲೆಗಳಿಲ್ಲ. ಕಾಮಗಾರಿ ಪೂರ್ಣಗೊಳಿಸಿ ಸಾಕಷ್ಟು ಸಮಯ ಕಳೆದ ನಂತರ ಅರ್ಜಿದಾರರು ಬಾಕಿ ಹಣಕ್ಕಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ನ್ಯಾಯಾಲಯ 2023ರ ಅ.30ರ ಮಧ್ಯಂತರ ಆದೇಶದಲ್ಲಿ ಸ್ಪಷ್ಟವಾಗಿ ಸೂಚಿಸಿದ್ದರೂ ಬಾಕಿ ಪಾವತಿಗೆ ಹಿಂದೆ-ಮುಂದೆ ನೋಡಲಾಗುತ್ತಿದೆ. ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಹಣ ಪಾವತಿಸದೆ ಕಚೇರಿಗೆ ಕಚೇರಿಗೆ ಅಲೆದಾಡಿಸುವುದು ಸರಿಯೇ?’ ಎಂದು ನ್ಯಾಯಪೀಠ ಪ್ರಶ್ನಿಸಿದೆ.