ಬೆಂಗಳೂರು;- ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಇರಬೇಕು. ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯ ಬಗ್ಗೆ ಪರಿಶೀಲಿಸಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿಯಲ್ಲಿ ಸೌಲಭ್ಯಗಳು ಹಾಗೂ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇದ್ದು, ಅನುದಾನ ಹೆಚ್ಚು ಮಾಡಲಾಗುವುದು ಎಂದು ಭರವಸೆ ನೀಡಿದರು.

ನಾವು ಸಮಾಜದಲ್ಲಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸಬೇಕು. ಹಾಗೆ ಮಾಡುವುದೇ ನಮ್ಮೆಲ್ಲರ ಕರ್ತವ್ಯ. ನಾವು ಎಷ್ಟು ದಿನ ಬದುಕಿರುತ್ತೇವೆ ಎನ್ನುವುದು ಮುಖ್ಯ ಅಲ್ಲ. ರಾಷ್ಟ್ರಕವಿ ಕುವೆಂಪು ಹೇಳುವಂತೆ ಎಲ್ಲರೂ ವಿಶ್ವಮಾನವರಾಗಿಯೇ ಹುಟ್ಟಿದರೂ, ಬೆಳೆಯುವಾಗ ಅಲ್ಪ ಮಾನವರಾಗುತ್ತಾರೆ. ನಾವು ವಿಶ್ವಮಾನವರಾಗಲು ಪ್ರಯತ್ನ ಮಾಡುವುದೇ ಸಮಾಜಕ್ಕೆ ಕೊಡುವ ಕೊಡುಗೆ. ನಾವು ಮನುಷ್ಯರಾಗಿ ಬಾಳುವ ಪ್ರಯತ್ನ ಮಾಡಬೇಕು. ಧರ್ಮ-ಧರ್ಮಗಳ ನಡುವೆ ಸಂಘರ್ಷ, ಜಾತಿ- ಜಾತಿಗಳ ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಧರ್ಮ ಬದುಕಿನ ಮಾರ್ಗ. ಮನುಷ್ಯನ ಬದುಕಿಗಾಗಿ ಧರ್ಮವಿದೆ. ಯಾವ ಧರ್ಮ ಮನುಷ್ಯನನ್ನು ದ್ವೇಷಿಸುತ್ತದೆಯೋ ಅದನ್ನು ಧರ್ಮ ಎಂದು ಕರೆಯಲಾಗುವುದಿಲ್ಲ. ಬಸವಣ್ಣ ಹೇಳಿದಂತೆ ದಯೆಯೇ ಧರ್ಮದ ಮೂಲ. ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು. ಮನುಷ್ಯರಾಗಲು ಪ್ರಯತ್ನಿಸೋಣ. ನಾವು ಸಮಾಜದ ಋಣ ತೀರಿಸುವ ಕೆಲಸ ಮಾಡಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.
