2024 ರ ಐಪಿಎಲ್ ಆರಂಭಕ್ಕೆ ಕೆಲವೇ ತಿಂಗಳು ಬಾಕಿ ಇದ್ದು, ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ನೇಮಿಸುವ ಮೂಲಕ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
ಆದರೆ, ರೋಹಿತ್ ಶರ್ಮಾ ಅಭಿಮಾನಿಗಳಿಗಾಗಿ ಶುಭ ಸುದ್ದಿಯೊಂದು ಹೊರಬಿದ್ದಿದ್ದು, ಖಂಡಿತವಾಗಿಯೂ ಇದು ನೆರವೇರಬೇಕು ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಏಕದಿನ ವಿಶ್ವಕಪ್ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಗಾಯಕ್ಕೆ ತುತ್ತಾಗಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಪುನಶ್ಚೇತನಕ್ಕಾಗಿ ಈಗಾಗಲೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ಸೇರಿಕೊಂಡಿದ್ದು, ಅವರು ಸಂಪೂರ್ಣವಾಗಿ ಫಿಟ್ ಆಗಲು ಇನ್ನು ಕೆಲ ಸಮಯ ಬೇಕಾಗಬಹುದು ಎಂದು ಹೇಳಲಾಗಿದೆ.
ಜನವರಿ 11ರಿಂದ ಅಫ್ಘಾನಿಸ್ತಾನ ವಿರುದ್ಧ ಆರಂಭವಾಗಲಿರುವ ಟಿ-20 ಸರಣಿಗೂ ಪಾಂಡ್ಯ ಅಲಭ್ಯರಾಗಿದ್ದು, ಐಪಿಎಲ್ ವೇಳೆಗೆ ಸಂಪೂರ್ಣ ಫಿಟ್ ಆಗುವುದು ಡೌಟ್ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿ ಅವರು 17ನೇ ಆವೃತ್ತಿಯ ಐಪಿಎಲ್ನಿಂದ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ಹಾಗೆ ಆದಲ್ಲಿ ಟೀಂ ಇಂಡಿಯಾ ಮತ್ತು ಮುಂಬೈ ಇಂಡಿಯನ್ಸ್ ತಂಡಕ್ಕೆ ಇದು ದೊಡ್ಡ ಹೊಡೆತ ಎಂದೇ ಹೇಳಬಹುದಾಗಿದೆ.