ಬೆಂಗಳೂರು;- ರೈತರೇ ಸ್ವಂತ ಖರ್ಚಿನಲ್ಲಿ ಪಂಪ್ಸೆಟ್ಗೆ ಅಗತ್ಯ ಸಲಕರಣೆ ಖರೀದಿ ಮಾಡಬೇಕೆಂಬ ಸರ್ಕಾರ ಆದೇಶ ಖಂಡನೀಯ ಎಂದು ಈರಣ್ಣ ಕಡಾಡಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಇನ್ನು ಮುಂದೆ ರೈತರ ಪಂಪ್ ಸೆಟ್ಗಳಿಗೆ ವಿದ್ಯುತ್ ಪಡೆಯಬೇಕಾದರೆ ಸ್ವಂತ ಖರ್ಚಿನಲ್ಲಿ ಟ್ರಾನ್ಸ್ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದ್ದು ಖಂಡನೀಯ.
ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೆ ರಾಜ್ಯದ ಸುಮಾರು 35 ಲಕ್ಷ ಪಂಪ್ಸೆಟ್ಗಳ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾವು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.
ಈ ಹಿಂದೆ ಪ್ರತಿ ನೀರಾವರಿ ಪಂಪ್ಸೆಟ್ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಸರ್ಕಾರದ ಈ ಆದೇಶದಿಂದ ಕನಿಷ್ಠ 2 ಲಕ್ಷ ರೂಪಾಯಿ ನೀಡಿ ವಿದ್ಯುತ್ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆಗೆ ರೈತರನ್ನು ನೂಕಲಾಗಿದೆ. ಬರಗಾಲದಿಂದ ಕಂಗೆಟ್ಟಿರುವ ರೈತರು ಬದಲಿ ಮಾರ್ಗಗಳಿಲ್ಲದೇ ಹಲವೆಡೆ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ರೈತರ ಆತಂಕ ಹೆಚ್ಚಾಗಿದ್ದು, ಪರಿಣಾಮವಾಗಿ ರೈತರು ಮುಂದೇನು ಎಂದು ಯೋಚಿಸುವಂತಾಗಿದೆ ಎಂದಿದ್ದಾರೆ.
ಮಳೆಯ ಅಭಾವದಿಂದ ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ಹಾಳಾಗಿ ಹೋಗಿದೆ. ಪ್ರಸ್ತುತ ಹಿಂಗಾರಿನಲ್ಲಿ ಕೂಡ ಮಳೆಯ ಅಭಾವದಿಂದಾಗಿ ರೈತನ ಬೆಳೆಗಳು ಸಂಪೂರ್ಣ ನಾಶವಾಗಿವೆ. ಸರ್ಕಾರದ ವರದಿಯ ಪ್ರಕಾರ ರಾಜ್ಯದಲ್ಲಿ 223 ತಾಲೂಕುಗಳು ಸಂಪೂರ್ಣ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ ಎಂದು ವಿವರಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 200 ಕ್ಕಿಂತಲೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಇದು ದುರ್ದೈವದ ಮತ್ತು ಅತ್ಯಂತ ಕಳವಳಿಕಾರಿ ಸಂಗತಿಯಾಗಿದೆ. ರಾಜ್ಯದಲ್ಲಿ ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲಿಕ್ಕೆ ರೈತರು ತೆರೆದ ಬಾವಿ, ಕೊಳವೆ ಬಾವಿಗಳ ಮೊರೆ ಹೊಗಿದ್ದಾರೆ. ಆದರೆ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ಜೊತೆಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಹೊಡೆತಕ್ಕೆ ರೈತರು ಬಸವಳಿದು ಹೋಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.