ಮೆಲ್ಬೊರ್ನ್: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಆ್ಯಷಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಮತ್ತೊಮ್ಮೆ ಇಂಗ್ಲೆಂಡ್ ಎದುರು ಆತಿಥೇಯ ಆಸ್ಟ್ರೇಲಿಯಾ ತಂಡವು ಭರ್ಜರಿ ಪ್ರದರ್ಶನ ತೋರಿದೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಮತ್ತೊಮ್ಮೆ ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್‌ನಲ್ಲಿ ಕೇವಲ 185 ರನ್‌ಗಳಿಗೆ ಸರ್ವಪತನ ಕಂಡಿದೆ. ಇನ್ನು ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ, ಮೊದಲ ದಿನದಾಟದಂತ್ಯದ ವೇಳೆಗೆ ಒಂದು ವಿಕೆಟ್ ಕಳೆದುಕೊಂಡು 61 ರನ್ ಬಾರಿಸಿದ್ದು, ಇನ್ನು ಕೇವಲ 124 ರನ್‌ಗಳ ಹಿನ್ನೆಡೆಯಲ್ಲಿದೆ.
ಇಲ್ಲಿನ ಮೆಲ್ಬೊರ್ನ್ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮೂರನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡದ ಆರಂಭಿಕರು ಬದಲಾದರು, ಪರಿಸ್ಥಿತಿ ಬದಲಾಗಲಿಲ್ಲ. ಆರಂಭಿಕ ಬ್ಯಾಟರ್ ಹಸೀಬ್ ಹಮೀದ್ ಖಾತೆ ತೆರೆಯುವ ಮುನ್ನವೇ ಪ್ಯಾಟ್ ಕಮಿನ್ಸ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಇನ್ನು ಮತ್ತೋರ್ವ ಅರಂಭಿಕ ಬ್ಯಾಟರ್ ಜಾಕ್ ಕ್ರಾವ್ಲಿ(12) ಹಾಗೂ ಡೇವಿಡ್ ಮಲಾನ್‌ಗೂ(14) ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನೆಲೆಯೂರಲು ಅವಕಾಶ ನೀಡಲಿಲ್ಲ.
