ಮಂಡ್ಯ :- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಇತರೆ ಇಲಾಖೆಗಳ ಸೌಲಭ್ಯಗಳ ಸಮಾವೇಶವನ್ನು ಮದ್ದೂರು
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಫೆಬ್ರವರಿ 11ರ ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಸಮಾವೇಶದ ಹಿನ್ನೆಲೆಯಲ್ಲಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಂಗಳವಾರ ಆಗಮಿಸಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇತಿಹಾಸ ಸೃಷ್ಟಿಸುವ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನತೆಗೆ ಸಮರ್ಪಣೆ ಮಾಡಲಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಬಡವರಿಗೆ ಹಲವು ಜನಪರ ಯೋಜನೆಗಳನ್ನು ಸರ್ಕಾರ ನೀಡಿದ್ದು ಅದನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ದೃಷ್ಟಿಯಿಂದ ಹಾಗೂ ಈ ಸೌಲಭ್ಯಗಳಿಂದ ವಂಚಿತರಾದವರಿಗೆ ಸೌಲಭ್ಯ ಪಡೆಯುವಂತೆ ಅರಿವು ಮೂಡಿಸುವ ಉದ್ದೇಶದಿಂದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ 10 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.
ಸಮಾವೇಶದ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಶಾಮಿಯಾನ, ಆಸನ ಮತ್ತು ಊಟದ ವ್ಯವಸ್ಥೆ ಸೇರಿದಂತೆ ಮೂಲ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳ ಮನವರಿಕೆ ಜತೆಗೆ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣ ಕಾರ್ಯಕ್ರಮ, ವಿವಿಧ ಇಲಾಖೆಯ ಸ್ಟಾಲ್ ಗಳನ್ನು ನಿರ್ಮಿಸಿ ರೈತರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಸಮಾವೇಶಕ್ಕೆ ತಾಲೂಕಿನ ಪ್ರತಿ ಗ್ರಾಪಂನಿಂದ ಫಲಾನುಭವಿಗಳನ್ನು ಸರ್ಕಾರಿ ಸಾರಿಗೆ ಬಸ್ ಮೂಲಕ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸಮಾವೇಶ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್ ಭಾಗವಹಿಸಲಿದ್ದಾರೆ. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಸಚಿವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದರು.
ಇದೇ ವೇಳೆ ತಹಸೀಲ್ದಾರ್ ಸೋಮಶೇಖರ್, ತಾಪಂ ಇಓ ಎಲ್.ಸಂದೀಪ್, ಟಿಎಚ್ಒ ರವೀಂದ್ರ ಬಿ.ಗೌಡ, ಬಿಇಒ ಸಿ.ಎಚ್.ಕಾಳಿರಯ್ಯ, ಕೃಷಿ ಅಧಿಕಾರಿ ಪರಮೇಶ, ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಪ್ರವೀಣ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಾರಾಯಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಪುರಸಭೆ ಮುಖ್ಯಾಧಿಕಾರಿ ಕರಿಬಸವಯ್ಯ, ಮುಖಂಡರಾದ ಡಾಬಾ ಮಹೇಶ್, ವಿಜಯ್ ಕುಮಾರ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ