ಬಾಗಲಕೋಟೆ:- ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ ವತಿಯಿಂದ ಹೋರಾಟ ಮಾಡಲಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರೈತರದ್ದೂ ಸೇರಿದಂತೆ ಯಾವುದೇ ಸಮಸ್ಯೆಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ ಹೋರಾಟ ರೂಪಿಸಲಾಗುವುದು ಎಂದರು.
ರಾಜ್ಯದಲ್ಲಿ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಬರದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬರಕ್ಕೂ, ನಮಗೂ ಸಂಬಂಧವಿಲ್ಲ ಎಂಬಂತಿದ್ದಾರೆ. ಇದೊಂದು ರೈತ ವಿರೋಧಿ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ನಾಮಕವಾಸ್ತೆ ಚರ್ಚೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಸಚಿವ ಶಿವಾನಂದ ಪಾಟೀಲ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಒಂದು ರೂಪಾಯಿ ಅನುದಾನ ನೀಡದ್ದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಾಂಗ್ರೆಸ್ ಶಾಸಕರು ತಲೆ ಎತ್ತಿ ತಿರುಗದಂತಾಗಿದೆ. ಬಿಜೆಪಿ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೂ ಅನುದಾನ ಸಿಕ್ಕಿಲ್ಲ. ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಕೊಡುವುದಾಗಿ ಹೇಳುತ್ತಿದ್ದಾರೆ. ಕ್ರಿಯಾ ಯೋಜನೆ ರೂಪಿಸಲು ಸೂಚಿಸಿದ್ದಾರೆ. ಇದು ಅವರ ಆದ್ಯತೆ ತೋರಿಸುತ್ತದೆ. ಅಲ್ಪಸಂಖ್ಯಾತರಿಗೆ ಕೊಡುವುದಕ್ಕೆ ವಿರೋಧವಿಲ್ಲ. ಆದರೆ, ರೈತರು, ಬಡವರು ಆದ್ಯತೆಯಲ್ಲವೇ ಎಂದು ಪ್ರಶ್ನಿಸಿದರು.