ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿದ್ದ ದೂರಿನ್ವಯ ಪ್ರಕರಣ ದಾಖಲಿಸಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್ ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದ್ದಾರೆ. ಸಿ.ಟಿ.ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಮನಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಬಸವರಾಜ ಹೊರಟ್ಟಿ ಭೇಟಿಯಾದ ಡಿಸಿಎಂ, ಸಚಿವರು
ಸಚಿವರ ವಿರುದ್ಧ ಸಿ.ಟಿ.ರವಿ ಬಳಸಿದ ಪ್ರಕರಣ ನಡೆಯುತ್ತಿದ್ದಂತೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಸಚಿವ ಹಾಗೂ ಪರಿಷತ್ ನ ಕಾಂಗ್ರೆಸ್ ಸಭಾ ನಾಯಕ ಬೋಸರಾಜು, ಸಚಿವ ರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಡಗಡಿ, ಡಾ.ಶರಣಪ್ರಕಾಶ್ ಪಾಟೀಲ್, ಹಿರಿಯ ಸದಸ್ಯರಾದ ಹರಿಪ್ರಸಾದ್, ನಾಗರಾಜ್ ಯಾದವ್, ಉಮಾಶ್ರೀ, ಶಾಸಕಿಯರಾದ ನಯನ ಮೋಟಮ್ಮ, ರೂಪಾ ಶಶಿಧರ್, ಲತಾ ಮಲ್ಲಿಕಾರ್ಜುನ್, ಅನ್ನಪೂರ್ಣ ತುಕಾರಂ ಸೇರಿದಂತೆ ಕಾಂಗ್ರೆಸ್ ಶಾಸಕರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.