ಬೆಂಗಳೂರು:- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಿಎಂ, ದೇಶದ ಹಿರಿಯ ರಾಜಕಾರಣಿ SM ಕೃಷ್ಣ ಅವರು ವಿಧಿವಶರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ಇನ್ನೂ SM ಕೃಷ್ಣ ನಿಧನಕ್ಕೆ ಸಾಕಷ್ಟು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯರ ಟ್ವಿಟ್ಟರ್ ಸಂದೇಶದಲ್ಲಿ, ಎಸ್.ಎಂ.ಕೃಷ್ಣ ಅವರ ಸಾವಿನಿಂದ ನಾನು ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು ಎಂದು ಅವರು ಹೇಳಿಕೊಂಡಿದ್ದಾರೆ
ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಎಸ್ ಎಂ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ನಿಧನರಾದ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆಯ ನಾಳೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ ಎಂದು ದೀರ್ಘಕಾಲದ ಒಡನಾಡಿಗಳು, ಸಂಬಂಧಿ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮ ಹೇಳಿಕೆಯ ಮೂಲಕ ತಿಳಿಸಿದ್ದಾರೆ.
ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ SM ಕೃಷ್ಣ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ನೆರವೇರಿಸಲಾಗುವುದು ಎಂದು ಡಿಕೆಶಿ ತಿಳಿಸಿದ್ದಾರೆ.
ಇನ್ನೂ ಕೃಷಿ ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬಿ ಎಸ್ ಯಡಿಯೂರಪ್ಪ, HD, ಕುಮಾರಸ್ವಾಮಿ, ದೇವೇಗೌಡರು, ಸಾಕಷ್ಟು ಸಚಿವರು ಮುಖಂಡರು ಸಂತಾಪ ಸೂಚಿಸಿದ್ದಾರೆ.