ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆ ಹಾಗು ಕಚೇರಿ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದು ಇದೀಗ ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಮಾದ್ಯಮದವರೊಂದಿಗೆ ಮಾತನಾಡಿದ ಅವರು, ED ಅವರ ಕೆಲಸ ಅವರು ಮಾಡುತ್ತಾರೆ, ವಶಕ್ಕೆ ಪಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಇದರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ, ದಾಳಿ ಮಾಡಲಿ ನಾವು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸಕ್ಕೆ ಬೆಳಗ್ಗೆ 7 ಗಂಟೆಗೆ ದಾಳಿ ನಡೆಸಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರವಷ್ಟೇ ಬಸನಗೌಡ ದದ್ದಲ್ ಎಸ್ಐಟಿ ವಿಚಾರಣೆ ಎದುರಿಸಿದ್ದರು. ಬೆಂಗಳೂರಿನ ಯಲಹಂಕದಲ್ಲಿರುವ ಬಸನಗೌಡ ದದ್ದಲ್ ನಿವಾಸದ ಮೇಲೂ ದಾಳಿ ನಡೆದಿದ್ದು, ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.