ಚಿಕ್ಕಮಗಳೂರು;- ವಯೋಸಹಜ ಅನಾರೋಗ್ಯದಿಂದ ಮಾಜಿ ಸಚಿವ, ಡಿ.ಬಿ.ಚಂದ್ರೇಗೌಡ ಇಂದು ಮುಂಜಾನೆ 12.20 ಕ್ಕೆ ನಿಧನ ಹೊಂದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿಗಳಲ್ಲಿ ಒಬ್ಬರಾಗಿದ್ದ ಡಿ.ಬಿ.ಚಂದ್ರೇಗೌಡರು ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಈ ನಾಲ್ಕೂ ಸದನಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅಪರೂಪದ ಸಾಧನೆ ಮಾಡಿದ್ದರು.
ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪಟೇಲ್ ಬೈರೇಗೌಡ ಶ್ರೀಮತಿ ಪುಟ್ಟಮ್ಮನವರ ಪುತ್ರರಾಗಿ 1936 ರ ಆಗಸ್ಟ್ 26ರಂದು ಜನಿಸಿದ್ದ ಡಿ.ಬಿ.ಚಂದ್ರೇಗೌಡರು ಕಾನೂನು ಪದವಿ ಪಡೆದು ವಕೀಲಿ ವೃತ್ತಿಯಲ್ಲಿ ನಿರತರಾಗಿದ್ದರು.
ರಾಜಕೀಯವಾಗಿ ಕಾಂಗ್ರೇಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಡಿ.ಬಿ. ಚಂದ್ರೇಗೌಡರು 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು, 1977 ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಒಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದರು. ರಾಜಕೀಯವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಗೆ ರಾಜಕೀಯ ಮರು ಹುಟ್ಟು ನೀಡಲು ಕ್ಷೇತ್ರವನ್ನು ತ್ಯಾಗ ಮಾಡಿದ್ದರು.
ನಂತರ ವಿಧಾನಪರಿಷತ್ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದೇವರಾಜು ಅರಸು ಅವರೊಂದಿಗೆ ಕ್ರಾಂತಿರಂಗದಲ್ಲಿ ಗುರುತಿಸಿಕೊಂಡು 1980-81 ರ ಅವಧಿಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದರು.
1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85 ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಇವರು ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಎರಡನೇ ಅವಧಿಗೆ ವಿಧಾನಸಭೆಗೆ ಪ್ರವೇಶಿಸಿದ್ದರು.
1999ರಲ್ಲಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ 1999 ರಿಂದ 2004ರ ವರೆಗೆ ಎಸ್.ಎಂ. ಕೃಷ್ಣಾ ಸಂಪುಟದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.