ಹುಬ್ಬಳ್ಳಿ ಜ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಮೀನುಗಾರಿಕೆ ಇಲಾಖೆ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಹಾಪ್ ಕಾಮ್ಸ್ ಮತ್ತು ಉದ್ಯಾನ ಹಾಗೂ ಫಲಪುಷ್ಪ ಪ್ರದರ್ಶನ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಧಾರವಾಡ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬ 2023-24 ನ್ನು ಜನೇವರಿ 26 ರಿಂದ 28 ರವರೆಗೆ ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದೆ.
ಜನೇವರಿ 26 ರಂದು ಸಂಜೆ 4 ಗಂಟೆಗೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ ಸಭಾಪತಿಯಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ.
Sleeping Tip: 6 ಗಂಟೆಗಿಂತ ಕಡಿಮೆ ನಿದ್ದೆ ಮಾಡ್ತೀರಾ..?! ವಕ್ಕರಿಸಿಬಿಟ್ಟೀತು ಈ ಮಾರಣಾಂತಿಕ ಖಾಯಿಲೆ ಹುಷಾರ್!
ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ, ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಮತ್ತು ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರು ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಾಸಕ ಮಹೇಶ ಟೆಂಗಿನಕಾಯಿ ಅಧ್ಯಕ್ಷತೆ ವಹಿಸುವರು. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು.
ಜನವರಿ 28 ರಂದು ಬಹುಮಾನ ವಿತರಣೆ ಕಾರ್ಯಕ್ರಮ
ಜನವರಿ 28 ರಂದು ಸಂಜೆ 4 ಗಂಟೆಗೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಲಿದೆ. ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ತೋಟಗಾರಿಕೆ ಅಪರ ನಿರ್ದೇಶಕರಾದ ಡಾ.ಪಿ.ಎಂ.ಸೊಬರದ,
ಡಾ.ಕೆ.ಬಿ.ದುಂಡಿ, ಎನ್.ಎಚ್.ಎಮ್ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಕೆ.ಎಂ.ಪರಶಿವಮೂರ್ತಿ, ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಸೋಮಶೇಖರ್ ಹುಲ್ಲೋಳಿ, ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಡಾ.ವಿ.ಎಸ್.ಪಾಟೀಲ ಸೇರಿದಂತೆ ಇತರರು ಭಾಗವಹಿಸುವರು.
ಪ್ರದರ್ಶನದ ಅಂಗವಾಗಿ ಜನೇವರಿ 27 ಮತ್ತು 28 ರಂದು ಸಂಜೆ 6.30 ಗಂಟೆಯಿಂದ 8 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಯೋಗೇಶ ಕಿಲಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.