ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಇಟಲಿ ಹಾಗೂ ಮಾಲ್ಟಾದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಡಬ್ಬಿಂಗ್ ನಡೆಯುತ್ತಿದ್ದು, ಡಬ್ಬಿಂಗ್ ಕೂಡ ಮುಕ್ತಾಯ ಹಂತ ತಲುಪಿದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಲಿದೆ.
ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಿದೆ.
ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು.
“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.