ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಆರೋಪ ಪಟ್ಟಿಯಲ್ಲಿನ ಮಾಹಿತಿಗಳು ಸತತವಾಗಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿದೆ. ಆದರೆ ಆರೋಪ ಪಟ್ಟಿಯಲ್ಲಿನ ಮಾಹಿತಿಯನ್ನು ಪ್ರಸಾರ ಮಾಡದಂತೆ ಹೈಕೋರ್ಟ್ ಮಾಧ್ಯಮಗಳಿಗೆ ಸೂಚನೆ ನೀಡಿದೆ.
ದರ್ಶನ್, ಪವಿತ್ರಾ ಹಾಗೂ ರೇಣುಕಾ ಸ್ವಾಮಿಯ ಕೆಲವು ಫೋಟೊಗಳು ಸಹ ಹರಿದಾಡುತ್ತಿವೆ. ಆದರೆ ಇದೀಗ ಹೈಕೋರ್ಟ್ ಸೂಚನೆಯೊಂದನ್ನು ನೀಡಿದ್ದು, ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ.
ಆಗಸ್ಟ್ 27 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರಿಗೆ ಸಂಬಂಧಿಸಿದ ಖಾಸಗಿ ಚಿತ್ರಗಳನ್ನು ಮಾಧ್ಯಮಗಳಲ್ಲಿ ಪ್ರದರ್ಶಿಸದಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ ಪ್ರತಿಬಂಧಕಾಜ್ಞೆ ತಂದಿದ್ದರು. ಈಗ ಅದೇ ಅರ್ಜಿಯನ್ನು ಉಲ್ಲೇಖಿಸಿ, ಆರೋಪ ಪಟ್ಟಿಯಲ್ಲಿರುವ ಮಾಹಿತಿ ಹಾಗೂ ಹರಿದಾಡುತ್ತಿರುವ ಕೆಲವು ಚಿತ್ರಗಳನ್ನು ಪ್ರದರ್ಶಿಸದಂತೆ ಸೂಚನೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಹೈಕೋರ್ಟ್ ಏಕಸದಸ್ಯ ಪೀಠವು ಮುಂದಿನ ವಿಚಾರಣೆ ವರೆಗೂ ಆರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಪ್ರಸಾರ ಮಾಡದಂತೆ ಸೂಚನೆ ನೀಡಿದೆ.