ಬೆಂಗಳೂರು:– ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಬದ್ಧವಾಗಿದೆ ಎಂದು ಸಚಿವ ಡಾ. ಎಂಸಿ ಸುಧಾಕರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಲು ರಾಜ್ಯ ಸರಕಾರ ಬದ್ಧವಾಗಿದ್ದು, ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿರುವುದಾಗಿ ಹೇಳಿದರು.
ಅತಿಥಿ ಉಪನ್ಯಾಸಕರ ವಿಚಾರದಲ್ಲಿ ಸರಕಾರ ಸಹಾನುಭೂತಿ ಹೊಂದಿದೆ. ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಸ್ಪಷ್ಟತೆ ಹೊಂದಿದ್ದಾರೆ. ಹಾಗಾಗಿ ಮುಷ್ಕರವನ್ನು ಕೈಬಿಟ್ಟು ತರಗತಿಗಳಿಗೆ ತೆರಳುವಂತೆ ಮನವಿ ಮಾಡಿದರು.
2013-18ರ ಅವಧಿಯಲ್ಲಿ ನೀಡಲಾಗಿದ್ದ ಎಲ್ಲ ಭರವಸೆಗಳನ್ನು ಕಾಂಗ್ರೆಸ್ ಸರಕಾರ ಈಡೇರಿಸಿತ್ತು. ಹಾಗೆ ಈ ಅವಧಿಯಲ್ಲೂ ಪ್ರಣಾಳಿಕೆಯಲ್ಲಿ ಹೇಳಿರುವಂತೆ ನಾವು ನಡೆದುಕೊಳ್ಳಲು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಪ್ರಸಕ್ತ ಶೇ.70ರಷ್ಟು ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ನಿಮ್ಮ ಮೇಲಿನ ಕಾರ್ಯದೊತ್ತಡ ನನಗೆ ತಿಳಿದಿದೆ. ತಮ್ಮನ್ನ ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಆದರೆ ತಮ್ಮ ಬೇಡಿಕೆ ಈಡೇರಿಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆ ಮತ್ತು ಕಾನೂನು ಇಲಾಖೆಯ ಜೊತೆ ಚರ್ಚಿಸಿ ತೀರ್ಮಾನಿಸಬೇಕಾಗಿದೆ ಎಂದು ಅವರು ಹೇಳಿದರು.