ಇರಾನ್ ದಾಳಿಯಿಂದಾಗಿ ಇಸ್ರೇಲ್ನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಈ ಹಿನ್ನೆಲೆ ಇಸ್ರೇಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಭಾರತೀಯರೆಲ್ಲರೂ ಶಾಂತವಾಗಿರಿ, ಸ್ಥಳೀಯ ಅಧಿಕಾರಿಗಳು ನೀಡಿದ ಸುರಕ್ಷತಾ ಕ್ರಮಗಳಿಗೆ ಬದ್ಧರಾಗಿರಿ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಭಾರತೀಯ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದೆ.
ರಾಯಭಾರ ಕಚೇರಿಯು ಸಹಾಯವಾಣಿ ಸಂಖ್ಯೆಗಳನ್ನು ನೀಡಿದ್ದು, ಎಲ್ಲಾ ಭಾರತೀಯ ಪ್ರಜೆಗಳು ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಸೂಚಿಸಿದೆ.
ಪಶ್ಚಿಮ ಏಷ್ಯಾ ವಲಯದಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆ ತರುವ ಇಸ್ರೇಲ್ ಮತ್ತು ಇರಾನ್ ನಡುವೆ ಹಗೆತನ ಹೆಚ್ಚುತ್ತಿರುವ ಬಗ್ಗೆ ಭಾರತ ಗಂಭೀರವಾಗಿ ಚಿಂತಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ.