ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಕಳೆದ ವರ್ಷದ ಮಾರ್ಚ್ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದು,
ನಿರ್ಗಮಿತ ಆಯುಕ್ತ ರಾಜೀವ್ ಕುಮಾರ್ ಅವರ ಸ್ಥಾನವನ್ನು ತುಂಬಲಿದ್ದಾರೆ. ಹಾಲಿ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಅವರಿಗೆ ಮಂಗಳವಾರ 65 ವರ್ಷ ಪೂರ್ಣಗೊಳ್ಳಲಿವೆ.ರಾಜೀವ್ ಕುಮಾರ್ ಇಂದು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯು ಹೆಸರು ಅಂತಿಮಗೊಳಿಸಲು ಸೋಮವಾರ ಸಭೆ ನಡೆಸಿತ್ತು.
ಈ ಸಭೆಯಲ್ಲಿ ಕೇದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದರು. ಸಿಇಸಿ ಹಾಗೂ ಚುನಾವಣಾ ಆಯುಕ್ತರ ನೇಮಕ ಕುರಿತ ಹೊಸ ನೇಮಕಾತಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕೆಲವೇ ದಿನಗಳಲ್ಲಿ ವಿಚಾರಣೆ ನಡೆಸಲಿದ್ದು,
ಫೆಬ್ರವರಿ 19ರವರೆಗೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ರಾಹುಲ್ ಗಾಂಧಿ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ರಾಹುಲ್ ಗಾಂಧಿ ವಿರೋಧದ ನಡುವೆಯೂ ಜ್ಞಾನೇಶ್ ಕುಮಾರ್ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ.