ಬೆಂಗಳೂರು:– ಗ್ಯಾರಂಟಿಯ ಅರೆಬರೆ ಜಾರಿಯಿಂದ ಬೊಕ್ಕಸ ಖಾಲಿ ಆಗಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಗ್ಯಾರೆಂಟಿ ಜಾರಿಯಿಂದ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದ್ದು ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಎಂದರು.
ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರುವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ತೋರಿಸುತ್ತಿದ್ದಾರೆ. ಇದು ಸಂವೇದನಾ ರಹಿತ ಎಡಬಿಡಂಗಿ ಸರ್ಕಾರ ಎಂದರು
ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದು ಟೀಕಿಸಿದರು.
ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಮೊದಲು ರಾಜ್ಯ ಸರ್ಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಿ. ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಮೊದಲು ರೈತರ ಸಂಕಷ್ಟಕ್ಕೆ ಧಾವಿಸಿದ್ದೆವು. ಎನ್ಡಿಆರ್ಎ ಮಾರ್ಗಸೂಚಿಗಿಂತ ದುಪ್ಪಟ್ಟು ಪರಿಹಾರ ನೀಡಿದ್ದೆವು. ನಂತರ ಕೇಂದ್ರದ ನೆರವು ಖಜಾನೆಗೆ ಬಂತು. ಆ ಕೆಲಸ ಮಾಡಲು ಇವರಿಗೇನು ದಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಳವೆ ಬಾವಿ ಕೊರೆಸಲು, ಜಾನುವಾರುಗಳಿಗೆ ಮೇವು ಖರೀದಿಸಲು ಆದೇಶವನ್ನು ಹೊರಡಿಸಿಲ್ಲ. ಕನಿಷ್ಟಪಕ್ಷ ಕೊಳವೆ ಬಾವಿಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕೊಡುತ್ತಿಲ್ಲ. ಕೇಳಿದರೆ ಎಲ್ಲದಕ್ಕೂ ಲಂಚ ಕೊಡಬೇಕು. ಇಲ್ಲದಿದ್ದರೆ ಯಾವುದೇ ಕೆಲಸ ಆಗುತ್ತಿಲ್ಲ ಎಂದು ರೈತರು ದೂರು ನೀಡುತ್ತಿದ್ದಾರೆ ಎಂದರು.