ಧಾರವಾಡ: ಜಿಮ್ನಾಸ್ಟಿಕ್ ಕ್ರೀಡೆಯಲ್ಲಿ ಸಾಧನೆ ಮೆರೆಯಬೇಕಾದರೆ ಕಠಿಣ ಪರಿಶ್ರಮ, ಶ್ರದ್ಧೆ, ಏಕಾಗ್ರತೆ ಹಾಗೂ ನಿರಂತರ ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಧಾರವಾಡ ಶಹರ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಬಾಲ ಮಾರುತಿ ಸಂಸ್ಥೆ ಕಿಲ್ಲಾ ಧಾರವಾಡಲ್ಲಿ ಆಯೋಜಿಸಿದ್ದ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 14, 17 ವಯೋಮಿತಿಯ ಬಾಲಕ, ಬಾಲಕಿಯರ ರಾಜ್ಯಮಟ್ಟದ ಜಿಮ್ನಾಸ್ಟಿಕ್ಸ್ ಪಂದ್ಯಾವಳಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಜಿಮ್ನಾಸ್ಟಿಕ್ ಕ್ರೀಡೆಯಲ್ಲಿ ಭಾಗವಹಿಸುತ್ತಿರುವ ಎಲ್ಲರಿಗೂ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಮಕ್ಕಳು ಪ್ರಾಯೋಗಿಕವಾಗಿ ಜಿಮ್ನಾಸ್ಟಿಕ್ ಚಟುವಟಿಕೆಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಕಾರ್ಮಿಕ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿ ಎಸ್.ಎಂ. ಹುಡೇದಮನಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾದೇವಿ ಬಸಾಪೂರ, ಅಶೋಕ ಸಿಂದಗಿ, ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿ ಜಿ.ಎನ್.ಮಠಪತಿ ಸೇರಿದಂತೆ ಹಲವರು ಭಾಗವಹಿಸಿದ್ದರು.