ಬೆಂಗಳೂರು:- ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ದ್ವೇಷ ರಾಜಕಾರಣ ಮಾಡಲಾಗುತ್ತಿದೆ. ಆದರೆ ಕಾಲಚಕ್ರ ಉರುಳಲಿದೆ ಎಂದರು.
ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ವಿಚಾರದಲ್ಲಿ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಅಧಿಕಾರಿಗಳೂ ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ.
ಭಗವಂತ ಹಾಗು ನ್ಯಾಯಾಲಯದ ಮೇಲೆ ನನಗೆ ನಂಬಿಕೆಯಿದೆ ಎಂದು ಹೇಳಿದರು.
ಸಿಬಿಐ ಅವರಿಗೆ ನ್ಯಾಯಾಲಯದ ಮೆಟ್ಟಿಲೇರುವ ಹಕ್ಕಿದೆ, ಅವರು ಹೋಗಿದ್ದಾರೆ. ಅವರು ಏನು ಹೇಳಬೇಕೋ ಹೇಳುತ್ತಾರೆ, ನಾವು ಏನು ಹೇಳಬೇಕೋ ಹೇಳುತ್ತೇವೆ. ಅಂತಿಮವಾಗಿ ನ್ಯಾಯಾಲಯ ತೀರ್ಮಾನ ಮಾಡುತ್ತದೆ. ನ್ಯಾಯಾಲಯದಲ್ಲಿ ಅನ್ಯಾಯ ಆಗುವುದಿಲ್ಲ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನನ್ನ ವಿರುದ್ಧ ಒಂದೇ ಒಂದು ಪ್ರಕರಣವೂ ದಾಖಲಾಗಿಲ್ಲ. ನ್ಯಾಯಾಲಯದ ಆದೇಶವಿಲ್ಲದಿದ್ದರೂ ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಾಗಿತ್ತು. ಈಗಿನ ಸರ್ಕಾರ ತನ್ನ ನಿರ್ಧಾರ ತೆಗೆದುಕೊಂಡು, ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಿದೆ. ಈ ತೀರ್ಮಾನದ ವಿರುದ್ಧ ಸಿಬಿಐ ಈಗ ನ್ಯಾಯಾಲಯದ ಮೆಟ್ಟಿಲೇರಿದೆ ಎಂದರು
ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆದ ನಂತರವೂ ನನ್ನ ಕುಟುಂಬ ಸದಸ್ಯರು, ನನ್ನ ಸಂಸ್ಥೆ, ನನ್ನ ಜತೆ ವ್ಯವಹಾರ ಹೊಂದಿದ್ದವರಿಗೆ ನೋಟೀಸ್ ನೀಡಲಾಗಿದೆ. ನನ್ನ ಜೊತೆ 30 ವರ್ಷಗಳ ಹಿಂದೆ ವ್ಯವಹಾರ ಮಾಡಿದವರಿಗೂ ನೋಟೀಸ್ ನೀಡಿದ್ದಾರೆ. ಅವರ ಉದ್ದೇಶ ಏನು ಎಂಬುದೇ ಗೊತ್ತಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.