ಬೆಂಗಳೂರು:- ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮೂರರಲ್ಲೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಅದರಲ್ಲೂ ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಈ ಬಗ್ಗೆ ಅವರ ತಾಯಿ ಅನಿತಾ ಕುಮಾರಸ್ವಾಮಿ ಅವರು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
ಬರೋಬ್ಬರಿ ಮೂರು ಕ್ಷೇತ್ರ, ರಾಮನಗರ, ಮಂಡ್ಯ, ಚನ್ನಪಟ್ಟಣದಲ್ಲಿ ಸೋತಿರುವ ನಿಖಿಲ್ ಗೆ ರಾಜಕೀಯದಲ್ಲಿ ಏಳಿಗೆ ಸಿಗುತ್ತನೇ ಇಲ್ಲವಲ್ಲ ಎಂಬ ನೋವು ಸಹಜವಾಗಿ ಅವರ ಕುಟುಂಬದವರಲ್ಲಿ ಕಾಡಿದೆ. ಇದೀಗ ನಿಖಿಲ್ ಹ್ಯಾಟ್ರಿಕ್ ಸೋಲಿನ ಬಗ್ಗೆ ಅನಿತಾ ಕುಮಾರಸ್ವಾಮಿ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.
ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ. ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದಿದ್ದಾರೆ. ಈ ಮೂಲಕ ನಿಖಿಲ್ ಸೋಲು ಹೀಯಾಳಿಸುವವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ ಎಂದು ಬರೆದುಕೊಂಡಿದ್ದಾರೆ.
ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ ಆಗುತ್ತದೆ. ನನ್ನ ಮಗನ ಬಗ್ಗೆ ರಾಜ್ಯದ ಜನತೆಗೆ ಹೆಚ್ಚೇನೂ ಹೇಳುವ ಅಗತ್ಯವಿಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ನಾಯಕ ನಟ. ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನೂ ನನ್ನ ಪತಿ ಹೆಮ್ಮೆಪಡುತ್ತೇವೆ ಎಂದಿದ್ದಾರೆ.
ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು. ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ಮನಸ್ಸು, ಹೃದಯ ವೈಶಾಲ್ಯತೆ ಏನೆಂದು ತಾಯಿಯಾಗಿ ನನಗೆ ಚನ್ನಾಗಿ ಗೊತ್ತು ಎಂದು ಭಾವನೆಗಳನ್ನು ಹಂಚಿಕೊಂಡಿದ್ದಾರೆ.