ಬೆಂಗಳೂರು: ಕನ್ನಡ ಚಿತ್ರರಂಗದ ಶ್ರೇಷ್ಟ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು.
ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ ನಟಿಸುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು,
ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ ಎಂದಿರುವ ಅವರು; ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಶೋಕ ವ್ಯಕ್ತಪಡಿಸಿದ್ದಾರೆ.