ಬೆಂಗಳೂರು: ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ H.D.ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ನಡೆಸಿದ್ರು. ಈ ಮಾಧ್ಯಮ ಗೋಷ್ಠಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಸೇರಿದಂತೆ ಈತರ JDS ನಾಯಕರು ಭಾಗಿಯಾಗಿದ್ದರು.
ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿ ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದು ಅವರು ಆರೋಪಿಸಿದರು.
ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು HD ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
SIT ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ಆ ವಿಚಾರವಾಗಿ ದೂರು ನೀಡಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
ಡಿಸಿಎಂ DK ಶಿವಕುಮಾರ್ ಹಸ್ತಕ್ಷೇಪದಲ್ಲಿ ನಡೆಯುವ ತನಿಖೆಯಿಂದ ವಾಸ್ತವ ಹೊರಬರುವುದಿಲ್ಲ. DK ಶಿವಕುಮಾರ್ ಅವರನ್ನು ಸಂಪುಟದಿಂದ ವಜಾಗೊಳಿಸಿ ತನಿಖೆ ಮುಂದುವರಿಸಲಿ ಎಂದು ಕುಮಾರಸ್ವಾಮಿ ಹೇಳಿದರು. ಈ ಪ್ರಕರಣದ ಪಾರದರ್ಶಕ ತನಿಖೆಯಾಗಬೇಕಿದೆ. SITಯಿಂದ ನ್ಯಾಯಯುತವಾದ ತನಿಖೆ ಸಾಗದು. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದೂ ಕುಮಾರಸ್ವಾಮಿ ಆಗ್ರಹಿಸಿದರು.