ಬೆಂಗಳೂರು:- ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಬಿಜೆಪಿ ಹೊರಡಿಸಿದ್ದ ಆದೇಶಕ್ಕೆ ಕ್ಯಾಬಿನೆಟ್ ಬ್ರೇಕ್ ಹಾಕಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಸಚಿವ ಸಂಪುಟ ಸಭೆಗೆ ಡಿಸಿಎಂ ಡಿಕೆಶಿ ಗೈರಾಗಿದ್ದರು. ಹಿತಾಸಕ್ತಿ ಸಂಘರ್ಷ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಿಂದ ದೂರ ಉಳಿದಿದ್ದರು ಎನ್ನಲಾಗಿದೆ.
ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಗೃಹ ಇಲಾಖೆಗೆ ಈ ಸಂಬಂಧ ಕಾನೂನು ಅಭಿಪ್ರಾಯ ನೀಡಿದ್ದರು. ಈ ನಿಟ್ಟಿನಲ್ಲಿ ಒಳಾಡಳಿತ ಇಲಾಖೆ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ, ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸೆ.25, 2019ರಂದು ದೆಹಲಿ ವಿಶೇಷ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಕಾಯ್ದೆ 1946 ಅಡಿ ಸೆಕ್ಷನ್ 6 ಅನ್ವಯ ತನಿಖೆ ಕೈಗೊಳ್ಳಲು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದ್ದರು ಎನ್ನಲಾಗಿದೆ.