ಲಾಹೋರ್: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 12 ಪ್ರಕರಣಗಳಲ್ಲಿ ಜಾಮೀನು ಸಿಕ್ಕಿದೆ.
ಮೇ 9ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿಗೆ ಜಾಮೀನು ಸಿಕ್ಕಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿಗೆ ಶಿಕ್ಷೆ ವಿಧಿಸಿತ್ತು. ಇದೀಗ ಉಭಯ ನಾಯಕರಿಗೂ ಜಾಮೀನು ಮಂಜೂರಾಗಿದೆ.
ಆರ್ಥಿಕವಾಗಿ, ರಾಜಕೀಯವಾಗಿ ಸಂಕಷ್ಟದಲ್ಲಿರುವ ಪಾಕಿಸ್ತಾನ ಸಂಸತ್ ಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿತ್ತು. ಜೈಲು ಸೇರಿರುವ ಮಾಜಿ ಪ್ರಧಾನಿ ಇಮ್ರಾನ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು ಅಚ್ಚರಿಯ ರೀತಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಪ್ರಧಾನಿಯಾಗುವ ಕನಸು ಕಂಡಿದ್ದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಿಎಂಎಲ್ಎನ್ ಮತ್ತು ಬಿಲಾವಲ್ ಭುಟ್ಟೋ ಅವರ ಪಿಪಿಪಿ ಭಾರೀ ಹಿನ್ನಡೆ ಸಾಧಿಸಿವೆ. ಹೀಗಾಗಿ ಪಾಕಿಸ್ತಾನದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು ಆಡಳಿತ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ಹರಸಾಹಸಪಡುತ್ತಿವೆ.