ಬೆಂಗಳೂರು:– ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಲಿ ಸೆಕ್ಯುಲರ್ ಸಿದ್ಧಾಂತದವರೆಲ್ಲ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬಕ್ಕೆ ಸೀಮಿತವಾಗಿದೆ. ಜೆಡಿಎಸ್ನ ಡಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಸೇರಿದಂತೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದರು
ನಾವು ಗ್ಯಾರಂಟಿ ಕಾರ್ಯಕ್ರಮ ಕೊಟ್ಟಾಗ ಅವನ್ನು ಟೀಕಿಸಿದ್ದ ಪ್ರಧಾನಿಯವರು, ಈಗ ಮೋದಿ ಗ್ಯಾರಂಟಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರೇ ನಿಮಗೆ ನಾಚಿಕೆ ಆಗತ್ತೋ ಇಲ್ವೋ ಎಂದು ಪ್ರಶ್ನಿಸಿದರು.
ರಾಜ್ಯದ ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ, ನಮ್ಮ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.