ಕೊಪ್ಪಳ: ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯಗಳ ಆರ್ಥಿಕ ಸ್ಥಿತಿಗತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಜೆಡಿಎಸ್ ರಾಜ್ಯ ಮುಖಂಡ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
ಕೊಪ್ಪಳ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಸರ್ಕಾರ ಸರಿಯಾಗಿ ಅನುಷ್ಠಾನ ಮಾಡಿಲ್ಲ. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯಗಳ ಆರ್ಥಿಕ ಸ್ಥಿತಿ ಸರಿಯಾಗಿಲ್ಲ ಎಂಬುದನ್ನು ಮಾಧ್ಯಮಗಳ ಮೂಲಕ ಗಮನಿಸಿದ್ದೇನೆ ಎಂದರು.
ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಎಲ್ಲೂ ಮಾತನಾಡಿಲ್ಲ. ಎನ್ಡಿಎ ಅಭ್ಯರ್ಥಿ ಗೆಲ್ಲಿಸುವ ಹೊಣೆ ಪಕ್ಷದ ಕಾರ್ಯಕರ್ತರ ಮೇಲಿದೆ. ಜನಾಭಿಪ್ರಾಯ ಸಂಗ್ರಹಿಸಿ ವರಿಷ್ಠರೆದುರು ನೀಡುತ್ತೇವೆ. ಯೋಗೇಶ್ವರ್ ಅವರು ಸದ್ಯ ಎಂಎಲ್ಸಿಯಾಗಿದ್ದಾರೆ. ಅವರ ಅಧಿಕಾರಾವಧಿ ಇನ್ನೂ ಇದೆ ಎಂದು ತಿಳಿಸಿದರು.
ಕಾಂಗ್ರೆಸ್ ದೂರ ಇಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ಚನ್ನಪಟ್ಟಣ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತಾರೆ. ಯಾರಿಗೆ ಅವಕಾಶ ಎಂಬುದನ್ನು ಜನರು ತೀರ್ಮಾನಿಸುತ್ತಾರೆ ಎಂದು ಹೇಳಿದರು.
ಕುಮಾರಸ್ವಾಮಿಯವರು ರಾಜಕಾರಣದಲ್ಲಿ ಹಿಟ್ ಆಂಡ್ ರನ್ ಮಾಡಲ್ಲ. ಸಮರ್ಪಕ ಸಾಕ್ಷ್ಯಾಧಾರ ಇದ್ದಾಗ ಮಾತ್ರ ವಿಷಯ ಪ್ರಸ್ತಾಪಿಸುತ್ತಾರೆ. ಸಮಯ ಬಂದಾಗ ಸಾಕ್ಷ್ಯಗಳನ್ನು ಒಂದೊಂದಾಗಿ ಬಿಡುಗಡೆ ಮಾಡುತ್ತಾರೆ. ನಾವು ಬಿಜೆಪಿ ಜೊತೆ ಕೈ ಜೋಡಿಸಿದ್ದೇವೆ ಎಂದ ಮಾತ್ರಕ್ಕೆ ಪಕ್ಷದ ಸಿದ್ಧಾಂತಗಳನ್ನು ಮಾರಾಟಕ್ಕಿಟ್ಟಿಲ್ಲ. ಬಿಜೆಪಿ ಜೊತೆ ಶಾಶ್ವತ ಹೊಂದಾಣಿಕೆಗಾಗಿ ದೇವೇಗೌಡರು ತಮ್ಮ ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಸಲ ಕೈ ಜೋಡಿಸಿದ್ದಾರೆ. ಜೆಡಿಎಸ್ ಎಲ್ಲ ಸಮಾಜಗಳ ಪರ, ರೈತರ ಪರ ಸಕ್ರೀಯವಾಗಿರುತ್ತದೆ ಎಂದು ವಿವರಿಸಿದರು.
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಸದೃಢವಾಗಿದೆ. ಉತ್ತರ ಕರ್ನಾಟಕದಲ್ಲೂ ಇತ್ತು. ಸದ್ಯ ಈ ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕಿದೆ. ಇಲ್ಲಿನ ಸಮಸ್ಯೆಗಳ ಬಗ್ಗೆಯೂ ಪಕ್ಷ ಹಾಗೂ ಪಕ್ಷದ ನಾಯಕರು ಧ್ವನಿ ಎತ್ತಿದ್ದಾರೆ. ಮುಂದಿನ ದಿನಗಳಲ್ಲೂ ಪಕ್ಷ ಉತ್ತರ ಕರ್ನಾಟಕದ ಜನರ, ರೈತರ ಸಮಸ್ಯೆಗಳ ನಿವಾರಣೆಗೆ ಶ್ರಮಿಸುತ್ತದೆ ಎಂದು ಭರವಸೆ ನೀಡಿದರು.