ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆದ್ದು ಬೀಗಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ಪರ ಸುನಿಲ್ ನರೈನ್ 56 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 13 ಫೋರ್ಗಳೊಂದಿಗೆ 109 ರನ್ ಸಿಡಿಸಿದರು. ಈ ಶತಕದ ನೆರವಿನಿಂದ ಕೆಕೆಆರ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 223 ರನ್ ಕಲೆಹಾಕಿತು.
224 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಜವಾಬ್ದಾರಿಯುತ ಬ್ಯಾಟಿಂಗ್ನೊಂದಿಗೆ ಇನಿಂಗ್ಸ್ ಕಟ್ಟಿದ ಬಟ್ಲರ್ 60 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ ಅಜೇಯ 107 ರನ್ ಬಾರಿಸಿದರು. ಈ ಶತಕದ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವು 20ನೇ ಓವರ್ನ ಕೊನೆಯ ಎಸೆತದಲ್ಲಿ ಗುರಿ ಮುಟ್ಟಿತು.
ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಬೃಹತ್ ಸ್ಕೋರ್ ಚೇಸ್ ಅನ್ನು ಚೇಸ್ ಮಾಡಿ ಗೆದ್ದ ವಿಶೇಷ ದಾಖಲೆಯನ್ನು ರಾಜಸ್ಥಾನ್ ರಾಯಲ್ಸ್ ತಂಡ ಮರು ನಿರ್ಮಿಸಿದರು. ಅಂದರೆ ಇದಕ್ಕೂ ಮುನ್ನ ಈ ದಾಖಲೆ ರಾಜಸ್ಥಾನ್ ರಾಯಲ್ಸ್ ತಂಡದ ಹೆಸರಿನಲ್ಲಿಯೇ ಇತ್ತು.
2020 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 224 ರನ್ಗಳನ್ನು ಚೇಸ್ ಮಾಡುವ ಮೂಲಕ ರಾಜಸ್ಥಾನ್ ರಾಯಲ್ಸ್ ಈ ದಾಖಲೆ ಬರೆದಿದ್ದರು. ಇದೀಗ ಕೆಕೆಆರ್ ನೀಡಿ 224 ರನ್ಗಳ ಗುರಿಯನ್ನು ಬೆನ್ನತ್ತುವ ಮೂಲಕ ಆರ್ಆರ್ ಪಡೆ ಹಳೆಯ ದಾಖಲೆಯನ್ನು ಪುನರಾವರ್ತಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ಗಳನ್ನು ಚೇಸ್ ಮಾಡಿದ ತಂಡ ಎನಿಸಿಕೊಂಡಿದೆ.
ಇನ್ನು ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲಾರ್ಧದಲ್ಲಿ ಒಟ್ಟು 12 ಅಂಕಗಳನ್ನು ಕಲೆಹಾಕಿದೆ. ಈ ಅಂಕಗಳೊಂದಿಗೆ ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ ಆರ್ಆರ್ ತಂಡವು ಅಗ್ರಸ್ಥಾನದಲ್ಲಿದೆ.