ಕೇರಳ: ವಯಾನಾಡ್ನಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ಘೋಷಿಸಿದೆ.
ಮತ್ತೊಂದೆಡೆ, ಕೇರಳದ ಇಬ್ಬರು ಕೇಂದ್ರ ಸಚಿವರಾದ ಸುರೇಶ್ ಗೋಪಿ ಮತ್ತು ಜಾರ್ಜ್ ಕುರಿಯನ್ ಅವರೊಂದಿಗೆ ಮೋದಿ ಮಾತನಾಡಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನೆರವಾಗಲು ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವಂತೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಸೂಚಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ವಯನಾಡಿನಲ್ಲಿ ಭೂಕುಸಿತ: ದುರಂತದಲ್ಲಿ ಚಾಮರಾಜನಗರದ ದಂಪತಿ ನಾಪತ್ತೆ, ಹೆಚ್ಚಾಯ್ತು ಆತಂಕ!
ನೆರೆ ರಾಜ್ಯ ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಇಂದು ಮುಂಜಾನೆ ಎರಡರಿಂದ ಮೂರು ಭೀಕರ ಭೂಕುಸಿತ ಉಂಟಾಗಿದೆ.. ಹಲವಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 400 ಕುಟುಂಬಗಳು ತೊಂದರೆಗೊಳಗಾಗಿವೆ. ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುತ್ತಿವೆ.
ವಯನಾಡು ಜಿಲ್ಲೆಯ ಅಧಿಕಾರಿಗಳ ಪ್ರಕಾರ ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತವೊಂದರಲ್ಲಿ ಸಾವನ್ನಪ್ಪಿದೆ. ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.