ಬೆಂಗಳೂರು:- ಕನ್ನಡದ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು DCM ಡಿಕೆಶಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಾವೆಲ್ಲರೂ ಸೇರಿ ಕನ್ನಡವನ್ನು ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದರು.
ಕನ್ನಡ ನಾಮಫಲಕ ಕುರಿತ ಹೋರಾಟದ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
“ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ. ಇದರಿಂದ ಕರ್ನಾಟಕದ ಗೌರವ, ಘನತೆಗೆ ಧಕ್ಕೆಯಾಗುತ್ತದೆ. ಕಾನೂನು ಪಾಲನೆ ಎಲ್ಲರ ಕರ್ತವ್ಯ. ನೀವು ಹೋರಾಟ ಮಾಡುವುದಾದರೆ ಮಾಡಿ, 60% ನಾಮಫಲಕ ಹಾಕಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.
ʻʻಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟೀಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆʼʼ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.