ಬೆಂಗಳೂರು: ಮಂಡ್ಯದ (Mandya) ಕೆರಗೋಡಿನಲ್ಲಿ (Keragodu) ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಖಂಡಿಸಿ ಇಂದು (ಸೋಮವಾರ) ರಾಜ್ಯಾದ್ಯಂತ ಬಿಜೆಪಿಯಿಂದ (BJP) ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲೂ (Mysuru Bank Circle) ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಭಾರೀ ಹೈಡ್ರಾಮಾ ಕಂಡುಬಂದಿತು.
ರಾಷ್ಟ್ರಧ್ವಜಕ್ಕೆ ಸರ್ಕಾರದಿಂದ ಅಪಮಾನ ಹಾಗೂ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಐವರು ಇನ್ಸ್ಪೆಕ್ಟರ್ಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಆಯೋಜಿಸಲಾಗಿದೆ. ಪ್ರತಿಭಟನೆಗೆ ಅವಕಾಶ ನಿರಾಕರಿಸಿ ನೊಟೀಸ್ ಜಾರಿ ಮಾಡಲಾಗಿದೆ. ಆದರೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಶಾಸಕರು ಪ್ರತಿಭಟನೆಗೆ ಧುಮುಕಿದ್ದಾರೆ.
ಬ್ಯಾರಿಕೇಡ್ ಮತ್ತು ಪೊಲೀಸ್ ದಿಗ್ಬಂಧನದ ನಡುವೆ ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೇ ಜೈ ಶ್ರೀರಾಮ್ ಘೋಷಣೆ ಮೊಳಗಿಸುತ್ತಾ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟವೂ ನಡೆದಿದ್ದು, ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅಶೋಕ್ ಆಗಮಿಸುವ ಮೊದಲೇ ಪ್ರತಿಭಟನೆ ಮುಗಿದುಹೋಗಿದೆ. ಅಶೋಕ್ ಆಗಮನದ ಮೊದಲೇ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿರುವ ಪ್ರಸಂಗವೂ ನಡೆದಿದೆ.