ಮಂಡ್ಯ :- ಚುನಾವಣೆ ಪೂರ್ವದಲ್ಲಿ ಎಲ್ಲಾ ಪಕ್ಷಗಳು ಪ್ರಣಾಳಿಕೆಯನ್ನು ಬಿಡುಗಡೆ ಮಾಡ್ತಾರೆ ಆದರೆ, ನಾವು ಕೊಟ್ಟ ಎಲ್ಲಾ 5 ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಜಾರಿಗೆ ತಂದಿದ್ದೇವೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಭಾನುವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಬಗ್ಗೆ ಮಾಹಿತಿ ನೀಡುವ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕಳೆದ 8 ತಿಂಗಳಿಂದ ಜಿಲ್ಲೆಗೆ ಗ್ಯಾರಂಟಿ ಯೋಜನೆಯ ಜತೆಗೆ ಲೋಕೋಪಯೋಗಿ, ನೀರಾವರಿ ಸೇರಿದಂತೆ ಇನ್ನಿತರೆ ಇಲಾಖೆಗಳ ಮೂಲಕ ಅಭಿವೃದ್ಧಿಗೆ ಜಿಲ್ಲೆಗೆ 1000 ಕೋಟಿ ರೂ ಅನುದಾನ ನೀಡಿದೆ. 5 ಗ್ಯಾರಂಟಿ ಯೋಜನೆಗಳ ಮೂಲಕ ಮಾರ್ಚ್ ಅಂತ್ಯದವರೆಗೆ 56 ಸಾವಿರ ಕೋಟಿ ರೂ ಅನುದಾನವನ್ನು ಸಾರ್ವಜನಿಕರಿಗೆ ನೀಡಿದೆ. ಮುಂದಿನ ಒಂದು ವರ್ಷಕ್ಕೆ 69 ಸಾವಿರ ಕೋಟಿ ಅನುದಾನ ಬೇಕಾಗುತ್ತದೆ ಎಂದು ತಿಳಿಸಿದರು.
ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ವಿಶೇಷ ಆಸಕ್ತಿ ವಹಿಸಿದ ಹಿನ್ನಲೆಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಲೋಕೋಪಯೋಗಿ, ಕುಡಿಯುವ ನೀರು, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ 250 ಕೋಟಿ ರೂ ಅನುದಾನ ನೀಡಲಾಗಿದೆ ಎಂದರು. ಮದ್ದೂರು ತಾಲೂಕಿನಲ್ಲಿ ಅನ್ನ ಭಾಗ್ಯ ಯೋಜನೆಯಡಿ- 73,000, ಗೃಹ ಲಕ್ಷ್ಮಿ – 74000 ಹಾಗೂ ಗೃಹ ಜ್ಯೋತಿ ಯೋಜನೆಯಡಿ 71000 ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಯುವ ನಿಧಿ ಯೋಜನೆಗೆ ಹೆಚ್ಚಿನ ಫಲಾನುಭವಿಗಳು ಹೆಸರು ನೊಂದಾಯಿಸಿಕೊಳ್ಳಿ ಎಂದರು.
ಅವೈಜ್ಞಾನಿಕ ಕಾಮಗಾರಿಯಿಂದಾಗಿ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಹೆಚ್ಚು ಅಪಘಾತ ಮತ್ತು ಸಾವು ನೋವುಗಳು ಉಂಟಾಗುತ್ತಿತ್ತು, ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಹಲವು ಸಭೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ಜವಾಬ್ದಾರಿ ವಹಿಸಿ ಇಂದು ಅಪಘಾತ ಹಾಗೂ ಸಾವಿನ ಪ್ರಮಾಣ ಕಡಿಮೆ ಮಾಡಲಾಗಿದೆ ಎಂದು ತಿಳಿಸಿದರು.
ಆರ್ಥಿಕ ತಜ್ಞರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16 ರಂದು 15 ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಬಜೆಟ್ ರೈತ ಹಾಗೂ ಜನಪರವಾಗಿರುವ ಜತೆಗೆ ಮಂಡ್ಯಕ್ಕೆ ದೊಡ್ಡ ಕೊಡುಗೆ ಸಿಗಲಿದೆ ಎಂಬ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ 223 ತಾಲೂಕುಗಳು ಭೀಕರ ಬರಗಾಲ ಎದುರುಸುತ್ತಿದೆ. 5 ತಿಂಗಳ ಹಿಂದೆ ಕೇಂದ್ರಕ್ಕೆ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು ಹಾಗೂ ದೆಹಲಿ ಜಂತರ್ ಮಂತರ್ ನಲ್ಲಿ ಹೋರಾಟ ಮಾಡಿದರು ಎನ್. ಡಿ.ಆರ್.ಎಫ್ ಅಡಿಯಲ್ಲಿ ಪರಿಹಾರ ನೀಡಲು ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಇದು ಪ್ರಜಾಪ್ರಭುತ್ವ ದುರಂತ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ತೆರಿಗೆ ಪಾವತಿ ಮಾಡುವಲ್ಲಿ ದೇಶದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ನಮ್ಮ ತೆರಿಗೆ ಹಣ ನೀಡೋಕು ಕೇಂದ್ರ ಸರ್ಕಾರ ಮೀನಾಮೇಷ ಮಾಡುತ್ತಿರುವುದು ಸರಿಯಲ್ಲ ಎಂದರು. ಶಾಸಕ ಕೆ.ಎಂ.ಉದಯ್ ಮಾತನಾಡಿ, ತಾಲೂಕಿನ ಅಭಿವೃದ್ದಿ ಕಾರ್ಯಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ 275 ಕೋಟಿ ರೂ ಹಣವನ್ನು ಬಿಡುಗಡೆ ಮಾಡಿದ್ದು, ಬಹಳ ಚುರುಕಿನಿಂದ ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ. ಸಣ್ಣ ನೀರಾವರಿ ಹಾಗೂ ವಿವಿಧ ಇಲಾಖೆಗಳು ಸೇರಿ 200 ಕೋಟಿ ಅನುದಾನವನ್ನು ಮದ್ದೂರು ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ರಸ್ತೆ, ಕುಡಿಯುವ ನೀರು ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಬೇಡಿಕೆ ಇಡಲಾಗಿತ್ತು, ನಮ್ಮ ಬೇಡಿಕೆಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಚುನಾವಣೆಗೂ ಮುನ್ನ ಕಂದಾಯ ಇಲಾಖೆಯಲ್ಲಿ ಬೆಟ್ಟದಷ್ಟು ಸಮಸ್ಯೆಗಳಿದ್ದವು. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಸೀಲ್ದಾರ್ ನ್ಯಾಯಾಲಯಗಳಲ್ಲಿದ್ದ ಪ್ರಕರಣಗಳು ಹಾಗೂ ಇತರೇ ಕೆಲಸ ಕಾರ್ಯಗಳು ಮಿಂಚಿನ ವೇಗದಲ್ಲಿ ಇತ್ಯರ್ಥಗೊಳಿಸಲಾಗುತ್ತಿದೆ ಎಂದರು. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಹಂತ ಹಂತವಾಗಿ ಅಭಿವೃದ್ದಿಗೊಳಿಸಿ ಮದ್ದೂರು ಕ್ಷೇತ್ರವನ್ನು ಇಡೀ ರಾಜ್ಯದಲ್ಲಿ ಮಾದರಿ ತಾಲೂಕನ್ನಾಗಿ ಮಾಡುವುದೇ ನನ್ನ ಗುರಿಯಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ದೇಶದ ಇತಿಹಾಸದಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಮನೆ ಮನೆಗೆ ತಲುಪಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಹಿಳೆಯರ ಹೆಸರಿನಲ್ಲಿ ಯೋಜನೆಗಳನ್ನು ರೂಪಿಸಿರುವುದು ವಿಶೇಷವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾವೇಶ ನಡೆದ ಸ್ಥಳದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಆಹಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಸೆಸ್ಕ್ ಹಾಗೂ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ ಸುಮಾರು 20 ಕ್ಕೂ ಹೆಚ್ಚು ಅಂಗಡಿಗಳನ್ನು ತೆರೆದು ಇಲಾಖೆಗಳಿಂದ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ್ದು ಸಾರ್ವಜನಿಕರ ಗಮನ ಸೆಳೆಯಿತು ಹಾಗೂ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಸಮಾವೇಶದಲ್ಲಿ ಇ ಸ್ವತ್ತು, ಗೃಹ ಲಕ್ಷ್ಮಿ, ಕೃಷಿ, ತೋಟಗಾರಿಕೆ ಇಲಾಖೆ, ಗೃಹಜ್ಯೋತಿ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಹಾಗೂ ಕೃಷಿ ಇಲಾಖೆಯ ಪರಿಕರಗಳನ್ನು ರೈತರಿಗೆ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ದಿನೇಶ್ ಗೂಳಿಗೌಡ, ಪಿ.ರವಿಕುಮಾರ್, ಮರಿತಿಬ್ಬೇಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ,
ಜಿಲ್ಲಾಧಿಕಾರಿ ಡಾ.ಕುಮಾರ್, ಜಿಪಂ ಸಿಇಒ ಶೇಕ್ ತನ್ವಿರ್ ಆಸಿಫ್, ಉಪ ವಿಭಾಗಧಿಕಾರಿ ಎಂ.ಶಿವಾನಂದ, ಡಿವೈಎಸ್ಪಿ ಕೃಷ್ಣಪ್ಪ, ತಾಲೂಕು ಉಸ್ತುವಾರಿ ಅಧಿಕಾರಿ ಬಿ.ಕೆ.ಮಮತ, ತಹಸೀಲ್ದಾರ್ ಕೆ.ಎಸ್.ಸೋಮಶೇಖರ್, ತಾಪಂ ಇಒ ಎಲ್.ಸಂದೀಪ್, ಕೃಷಿ ಇಲಾಖೆ ಉಪ ನಿರ್ದೇಶಕಿ ಮಾಲತಿ, ಬಿಇಒ ಸಿ.ಎಚ್.ಕಾಳೀರಯ್ಯ ತಾಲೂಕು ಮಟ್ಟದ ಅಧಿಕಾರಿಗಳಾದ ಕೆ.ಎಂ.ರೇಖಾ, ನಾರಾಯಣ್, ಪ್ರಕಾಶ್, ಕೃಷ್ಣ, ಪರಮೇಶ್, ಸಿಪಿಐಗಳಾದ ಕೆ.ಆರ್.ಪ್ರಸಾದ್, ವೆಂಕಟೇಗೌಡ, ಸೇರಿದಂತೆ ಇತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ