ಮಂಡ್ಯ :- ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಆತಗೂರು ಗ್ರಾಮಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಕೆ.ಎಂ.ಉದಯ್ ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮಂಗಳವಾರ ಬರ ಅಧ್ಯಯನ ನಡೆಸಿದರು.
ಆತಗೂರು ಗ್ರಾಮದ ಜೋಗಿ ನಿಂಗಯ್ಯ ಹಾಗೂ ಜಯಮ್ಮ ಎಂಬುವವರ ಜಮೀನಿನಲ್ಲಿ ಬೆಳೆದು ನಿಂತಿರುವ ರಾಗಿ ಬೆಳೆಯನ್ನು ಪರಿಶೀಲಿಸಿದ ಸಚಿವರು ಜಮೀನಿನ ಮಾಲೀಕನಿಂದ ಅಗತ್ಯ ಮಾಹಿತಿ ಪಡೆದರು.
ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ 216 ಕ್ಷೇತ್ರಗಳಲ್ಲಿ ಬರಗಾಲ ವ್ಯಾಪಿಸಿದ್ದು, ಹೀಗಾಗಿ ಆತಗೂರು ಹೋಬಳಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ನೀರಿಲ್ಲದೇ ಬೆಳೆಗಳು ಒಣಗಿದ್ದು, ಈ ಸಂಬಂಧ ಕಂದಾಯ ಹಾಗೂ ಕೃಷಿ ಇಲಾಖೆಯಿಂದ ಜಂಟಿ ಸರ್ವೆ ಕಾರ್ಯ ಕೈಗೊಂಡು ಈಗಾಗಲೇ ಕೇಂದ್ರ ಸರ್ಕಾರಕ್ಕೆ 18 ಸಾವಿರ ಕೋಟಿ ಬೆಳೆ ನಷ್ಟ ಪರಿಹಾರದ ವರದಿ ಸಲ್ಲಿಸಿರುವುದಾಗಿ ಹೇಳಿದರು.
ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಸಮಯ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಬಂಧಿಸಿದ ಸಚಿವರು ಬರ ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ನೀಡಲಾಗುತ್ತಿದ್ದು, ಸಮರ್ಪಕ ವರದಿ ಆಧರಿಸಿ ಹೆಚ್ಚುವರಿ ಅನುದಾನ ನೀಡುವಂತೆ ಮತ್ತೋಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಮತ್ತೋಮ್ಮೆ ಬರ ಸಂಬಂಧ ಚರ್ಚಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು. ಜಿಲ್ಲೆಯಲ್ಲಿ 48 ಸಾವಿರದ 600 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ವಿವಿಧ ಬೆಳೆಗಳು ಹಾನಿಯಾಗಿ 43 ಕೋಟಿ ನಷ್ಟವಾಗಿದೆ ಎಂದು ತಿಳಿಸಿದರು.
ಬರ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ, ಹಾಗೂ ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣವಿದ್ದು, ಈ ಹಣವನ್ನು ಬಳಸಿಕೊಳ್ಳಲು ಆದೇಶಿಸಲಾಗಿದೆ ಎಂದರು.
ವಿಶ್ವೇಶ್ವರಯ್ಯ ನಾಲೆ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದಿರುವ ಬಹುತೇಕ ಬೆಳೆಗಳು ಮಳೆ ಇಲ್ಲದ ಕಾರಣ ಬೆಳೆಗಳು ಒಣಗಿವೆ. ಮಳೆಯಾಶ್ರಿತ ಪ್ರದೇಶದಲ್ಲಿ ಬೆಳೆದಿದ್ದ ಶೇ 100 ಕ್ಕೆ 100 ರಷ್ಟು ಬೆಳೆಗಳು ಒಣಗಿ ರೈತರಿಗೆ ಆರ್ಥಿಕ ಸಂಕಷ್ಟ ಉಂಟಾಗಿದೆ. ಈ ಬೆಳೆಗಳಿಗೆ ಬರ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಂಡಿದ್ದು, ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಆತ್ಮಸ್ಥೈರ್ಯ ತುಂಬಿದರು.
ವರದಿ : ಗಿರೀಶ್ ರಾಜ್ ಮಂಡ್ಯ