ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಿರ್ಮಿಸಲಾಗುತ್ತಿರುವ ಅತ್ಯಾಧುನಿಕ ಮಾದರಿಯ ಕ್ರೀಡಾ ಸಮುಚ್ಚಯ, ಜಿಮ್ ಕಟ್ಟಡ ಕಾಮಗಾರಿಗೆ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ಆವರಣದ ಬಾಸ್ಕೆಟ್ ಬಾಲ್ ಮೈದಾನದ ಪಕ್ಕದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಅಂದಾಜು ಮೊತ್ತ 9.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅತ್ಯಾಧುನಿಕ ಮಾದರಿಯ ಕ್ರೀಡಾ ಸಮುಚ್ಚಯ, ಜಿಮ್ ಕಟ್ಟಡ ಕಾಮಗಾರಿಗೆ ಗಣ್ಯರು ಭೂಮಿ ಪೂಜೆ ಮಾಡಿದರು.
ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ‘ಯುವಕರು, ಹಿರಿಯರು ಮತ್ತು ಮಹಿಳೆಯರಿಗೆ ವ್ಯಾಯಾಮ ಮಾಡಲು ಜಿಲ್ಲೆಯಲ್ಲಿ ಅತ್ಯಾಧುನಿಕ ಮಾದರಿಯ ವ್ಯಾಯಾಮ (ಜಿಮ್) ಕಟ್ಟಡ ನಿರ್ಮಾಣ ಮಾಡಲಾಗುವುದು. ಆಧುನಿಕ ಉಪಕರಣಗಳು ಸೇರಿದಂತೆ ವಿಶೇಷ ಸೌಲಭ್ಯ ಒಳಗೊಂಡಿರುತ್ತದೆ’ ಎಂದು ತಿಳಿಸಿದರು.
ಈ ವೇಳೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಮೇಯರ್ ಬಿ.ಶ್ವೇತ, ಉಪಮೇಯರ್ ಬಿ.ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ತಹಶೀಲ್ದಾರ ಗುರುರಾಜ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಸೇರಿದಂತೆ ಅಧಿಕಾರಿಗಳು, ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.