ಬೆಂಗಳೂರು:- ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಮೊಬೈಲ್ ಗೀಳಿಗೆ 13 ವರ್ಷದ ಬಾಲಕನೋರ್ವ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ.
ಆತ್ಮಹತ್ಯೆಗೆ ಶರಣಾದ ಬಾಲಕನನ್ನು ಧ್ರುವ ಎಂದು ಗುರುತಿಸಲಾಗಿದೆ. ಈತ 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.
ಧ್ರುವ ಮನೆಯವರ ಮಾತು ಕೇಳದೆ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದರು. ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಆಗ ಬಾಲಕ ಪ್ಯಾಂಟ್ ತೆಗೆದು ಸೊಂಟದ ಉಡದಾರ ಫ್ಯಾನ್ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆಗ ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನೆ ನೋಡುತ್ತಿದ್ದಳು. ಬಾಲಕ ಕೆಳಗೆ ಬಿದ್ದ ಸಮಯಕ್ಕೆ ಕೆಲಸ ಮುಗಿಸಿ ತಾಯಿ ಬಂದಿದ್ದಾರೆ. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ.
ಮಗನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.