ಚಿಕ್ಕಮಗಳೂರು :– ಬಿಜೆಪಿ ಪಕ್ಷದ ಮುಖಂಡರು ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ನಿಲ್ಲುವಂತೆ ಮಾಜಿ ಸಚಿವ ಸಿ.ಟಿ.ರವಿ ಅವರನ್ನು ಆಗ್ರಹಿಸಿದ್ದಾರೆ.
ಸೋಮವಾರ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಈ ಒತ್ತಾಯ ಕೇಳಿಬಂತು.
ಮುಖಂಡರು ಸಿ.ಟಿ.ರವಿ ಸಮ್ಮುಖದಲ್ಲೇ ಅವರನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರಿದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಜಿಲ್ಲೆಯ 5 ಕ್ಷೇತ್ರಗಳಲ್ಲಿ ಸೋತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಇದೇ ಫಲಿತಾಂಶ ಬಂದರೆ ಪಕ್ಷಕ್ಕೆ ತುಂಬಾ ಹಾನಿಯಾಗಲಿದೆ. ಅಂಥ ಪರಿಸ್ಥಿತಿ ಬರಬಾರದು, ಪಕ್ಷ ಇನ್ನಷ್ಟು ಸಂಘಟನಾತ್ಮಕವಾಗಿ ಬೆಳೆಯಬೇಕಾದರೆ ತಾವೇ ಸ್ಪರ್ಧೆ ಮಾಡಬೇಕು ಎಂದು ಆಗ್ರಹಿಸಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಿ.ಟಿ.ರವಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಕೋರಿ ಪಕ್ಷದ ವರಿಷ್ಠರಿಗೆ ಆಗ್ರಹಿಸಲು ಜಿಲ್ಲೆಯಿಂದ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದ ಮುಖಂಡರು, ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿ, ನೀವು ಇಲ್ಲೇ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಿ.ಟಿ.ರವಿ ಮಾತನಾಡಿ ಪಕ್ಷದ ಮುಖಂಡರು, ಕಾರ್ಯಕರ್ತರು ಶಿಸ್ತುಬದ್ಧವಾಗಿ ನಡೆದುಕೊಳ್ಳಬೇಕು. ನಿಯೋಗ ಹೋಗುವಂಥ ಕೆಲಸಕ್ಕೆ ಕೈ ಹಾಕಬೇಡಿ, ಯಾರಿಗೆ ಟಿಕೆಟ್ ಕೊಟ್ಟರೂ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.