ನವದೆಹಲಿ:- ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆಯಾಗಿದೆ. ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ. ಮುಂದಿನ ಸಿಇಸಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಇಂದು ಪಟ್ಟಿ ಬಿಡುಗಡೆ ಮಾಡುವುದಿಲ್ಲ, ನಾಳೆ ಬಿಡುಗಡೆ ಆಗಬಹುದು ಎಂದು ಮಾಹಿತಿ ನೀಡಿದರು.
ಇನ್ನೂ ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಈಗಾಗಲೇ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಆದ್ರೆ, ಬಿಜೆಪಿಯಲ್ಲಿ ಟಿಕೆಟ್ ಗೊಂದಲ ಇನ್ನೂ ಬಗೆಹರಿಯುತ್ತಿಲ್ಲ. ಇಂದು ನವದೆಹಲಿಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲೂ ಸಹ (CEC) ರಾಜ್ಯದ 28 ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿದೆ. ಆದ್ರೆ, ಯಾವುದೇ ಅಂತಿಮ ತೀರ್ಮಾನವಾಗಿಲ್ಲ. ಮತ್ತೊಂದು ಸಭೆ ಮಾಡಿ ಅಭ್ಯರ್ಥಿಯನ್ನು ಘೋಷಣೆ ಮಾಡಲು ಮುಂದಾಗಿದೆ. ಈ ಮೂಲಕ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ.
ಇನ್ನು ಸಿಇಸಿ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ವಿಸ್ತೃತ ಚರ್ಚೆಯಾಗಿದೆ. ಜೆಡಿಎಸ್ ವರಿಷ್ಠರ ಜೊತೆಗೂ ಬಿಜೆಪಿ ಹೈಕಮಾಡ್ ಚರ್ಚೆ ಮಾಡಿದೆ. ನಾಳೆ ಮತ್ತೊಂದು ಸುತ್ತಿನ ಸಭೆಯಲ್ಲಿ ಪಟ್ಟಿ ಅಂತಿಮವಾಗಲಿದೆ ಎಂದು ಸ್ಪಷ್ಟಪಡಿಸಿದರು.