ಯುಪಿ ವಾರಿಯರ್ಸ್ ವಿರುದ್ಧ 42 ರನ್ಗಳಿಂದ ಮುಂಬೈ ಇಂಡಿಯನ್ಸ್ ತಂಡವು ಗೆದ್ದು ಬೀಗಿದೆ.
ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 160 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಯುಪಿ ವಾರಿಯರ್ಸ್ ತಂಡ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 118 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕರಿಬ್ಬರು ಒಂದಂಕಿಗೆ ಪೆವಿಲಿಯನ್ ಸೇರಿಕೊಂಡರು. ಯಾಸ್ತಿಕಾ ಭಾಟಿಯಾ 9 ರನ್ಗಳಿಗೆ ಸುಸ್ತಾದರೆ, ಹೇಲಿ ಮ್ಯಾಥ್ಯೂಸ್ 4 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ತಂಡದ ಇನ್ನಿಂಗ್ಸ್ ಕಟ್ಟುವ ಕೆಲಸ ಮಾಡಿದ ನ್ಯಾಟ್ ಸ್ಕಿವರ್-ಬ್ರಂಟ್ ಹಾಗೂ ನಾಯಕಿ ಹರ್ಮನ್ ಪ್ರೀತ್ ಕೌರ್ ಕ್ರಮವಾಗಿ 45 ಹಾಗೂ 33 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರು. ಈ ಇಬ್ಬರ ಆಟದಿಂದ ತಂಡ 100 ರನ್ಗಳ ಗಡಿ ದಾಟಿತು. ಕೆಳಕ್ರಮಾಂಕದಲ್ಲಿ ಅಮೆಲಿಯಾ ಕೆರ್ 39 ರನ್ ಹಾಗೂ ಸಜೀವನ್ ಸಜನ 22 ರನ್ಗಳ ಕಾಣಿಕೆ ನೀಡಿದರು.
ಇನ್ನು ಈ ಗುರಿ ಬೆನ್ನಟ್ಟಿದ ಯುಪಿ ವಾರಿಯರ್ಸ್ ತಂಡಕ್ಕೂ ಉತ್ತಮ ಆರಂಭ ಸಿಗಲಿಲ್ಲ. ನಾಯಕಿ ಅಲಿಸಾ ಹೀಲಿ 3 ರನ್ಗಳಿಗೆ ವಿಕೆಟ್ ಒಪ್ಪಿಸಿದರೆ, ಕಿರಣ್ ನವ್ಗಿರೆ 7 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡರು. ಚಾಮರಿ ಅಥಾಪತ್ತು 3 ರನ್ಗಳಿಗೆ ಬ್ಯಾಟ್ ಎತ್ತಿಟ್ಟರೆ, ಗ್ರೇಸ್ ಹ್ಯಾರಿಸ್ 15 ರನ್, ಶ್ವೇತಾ ಸೆಹ್ರಾವತ್ 17 ರನ್ಗಳ ಕಾಣಿಕೆ ನೀಡಿದರು. ತಂಡದ ಪರ ಏಕಾಂಗಿ ಹೋರಾಟ ನಡೆಸಿದ ದೀಪ್ತಿ ಶರ್ಮಾ 36 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 53 ರನ್ ಕಲೆಹಾಕಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ