ಬೆಂಗಳೂರು: ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ ಅವರ ಗರ್ವಭಂಗವಾಗಬೇಕು ಎಂದು ಶಪಥ ಮಾಡಿದ್ದ ಎಚ್ಡಿ ದೇವೇಗೌಡ ಅವರಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನನ್ನದು ಗರ್ವ, ಅಹಂಕಾರ ಅಲ್ಲ. ಕನ್ನಡಿಗರ ರಕ್ತದಲ್ಲಿರುವ ಸ್ವಾಭಿಮಾನ ಎಂದಿದ್ದಾರೆ. ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು,
” ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ” ಎಂದಿದ್ದಾರೆ.