ಬೆಂಗಳೂರು: ಬೆಳಗಾವಿ ಗಡಿ ವಿವಾದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಖುದ್ದು ಸಿಎಂ ಬೊಮ್ಮಾಯಿ ತಮ್ಮ ವೈಯಕ್ತಿಕ ಹಾಗೂ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಇಂದು ಗಲಾಟೆ ಭುಗಿಲೆದ್ದ ಬೆನ್ನಲ್ಲೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಪರಸ್ಪರ ಚರ್ಚೆ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಎರಡೂ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಅಲ್ಲದೇ, ಎರಡೂ ರಾಜ್ಯಗಳ ಜನರ ನಡುವೆ ಸೌಹಾರ್ದಯುತ ಬಾಂಧವ್ಯ ಇದೆ. ಇದರಿಂದ ಕರ್ನಾಟಕದ ಗಡಿಗೆ ಸಂಬಂಧಿಸಿದಂತೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಮತ್ತೊಂದು ಟ್ವೀಟ್ನಲ್ಲಿ ಸ್ಪಷ್ಟಪಡಿಸಿದ್ದಾರೆ.

