ಬೆಂಗಳೂರು;- ಕೇಂದ್ರ ಸರ್ಕಾರದಿಂದ ನಯಾ ಪೈಸೆ ಬರ ಪರಿಹಾರ ಬಂದಿಲ್ಲ ಎಂದು ಹೆಚ್ ಕೆ ಪಾಟೀಲ್ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಂಪುಟ ಸಭೆಯಲ್ಲಿ ಬರದ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ನರೇಗಾ ದಡಿ ನೂರು ದಿನ ಕೆಲಸ ಮುಗಿಸಿದ ಕುಟುಂಬ ಬಹಳಷ್ಟು ಇದೆ. ಮಾನವ ದಿನಗಳನ್ನು 150 ಏರಿಸಲು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಕೂಡಲೇ ಮಾನವ ದಿನವನ್ನು 150ಕ್ಕೆ ಏರಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವಂತೆ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.
ಬರ ನಿರ್ವಹಣೆ ಹಾಗೂ ಮಾನವ ದಿನ ವೃದ್ಧಿಸುವ ಸಂಬಂಧ ಕೇಂದ್ರಕ್ಕೆ ಮನವಿ ಕೊಡಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಸಿಎಂಗೆ ಪ್ರಧಾನಿ ಭೇಟಿಗೆ ಸಮಯ ನೀಡಿಲ್ಲ. ಕಂದಾಯ ಸಚಿವರಿಗೆ ಸಮಯಾವಕಾಶ ನೀಡಿಲ್ಲ. ಕೇಂದ್ರದ ಬರ ಅಧ್ಯಯನ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ತಮ್ಮ ವರದಿ ನೀಡಿದ್ದಾರೆ.
ಆದರೆ, ಇಂದಿನವರೆಗೆ ಕೇಂದ್ರ ಸರ್ಕಾರ ನಯಾ ಪೈಸೆ ಬರ ಪರಿಹಾರ ಕೊಟ್ಟಿಲ್ಲ. ಇದಕ್ಕೆ ತೀವ್ರ ಕಳವಳ ವ್ಯಕ್ತವಾಯಿತು. ರಾಜ್ಯಕ್ಕೆ ಅನ್ಯಾಯವಾಗದಂತೆ ಕೇಂದ್ರಕ್ಕೆ ಒತ್ತಾಯಿಸಲು ನಿರ್ಧರಿಸಲಾಗಿದೆ. ಮಲತಾಯಿ ಧೋರಣೆಗೆ ತೀವ್ರ ತರದ ಅಭಿಪ್ರಾಯ ವ್ಯಕ್ತವಾಯಿತು. ಈಗಾಗಲೇ ಸುಮಾರು 790 ಕೋಟಿ ಡಿಸಿಗಳ ಪಿಡಿ ಖಾತೆಯಲ್ಲಿ ಇದೆ. ಮೇವು, ಬರ ನಿರ್ವಹಣೆಗೆ ಯಾವುದೇ ಅಡ್ಡಿ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ. ಸಚಿವರು ಎಲ್ಲ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ತೆರಳಿ ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ಸಿಎಂ ಸೂಚಿಸಿದರು. ರೈತರ ಬೆಳೆ ನಷ್ಟಕ್ಕೆ ಇನ್ಪುಟ್ ಸಬ್ಸಿಡಿ ಬಿಡುಗಡೆ ಮಾಡಲು ಕಾರ್ಯಕ್ರಮ ರೂಪಿಸಬೇಕು. ಅದಕ್ಕೆ ಬೇಕಾದ ಕ್ರಮ ಕೈಗೊಳ್ಳಲು ಕೃಷಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಇದೇ ವೇಳೆ ತಿಳಿಸಿದರು.