ಬೆಂಗಳೂರು: ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ (BJP) ಪರ ಅಲೆ ಇದೆ. ಆದರೂ ರಾಜ್ಯದಲ್ಲಿ ಕಾಂಗ್ರೆಸ್ (Congress) ಪಕ್ಷವು ಆಡಳಿತ ನಡೆಸುವ ಸಂದರ್ಭದಲ್ಲಿ ನಮ್ಮ ವಿರೋಧಿಗಳನ್ನು ಹಗುರವಾಗಿ ಪರಿಗಣಿಸದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಕಿವಿಮಾತು ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯಲ್ಲೂ ಕೂಡ ವಿವಿಧ ರೀತಿಯ ಸವಾಲುಗಳಿರುತ್ತವೆ. ಆ ಸವಾಲುಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತು ಸಾಧನೆ ಮಾಡಲು ನಮ್ಮ ಎದುರಾಳಿಗಳನ್ನು ನಾವು ಹಗುರವಾಗಿ ಪರಿಗಣಿಸಬಾರದು. ನರೇಂದ್ರ ಮೋದಿಜೀ (Narendra Modi) ಅವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು.
ಸ್ವಾತಂತ್ರ್ಯ ಬಂದ ಬಳಿಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡ ಮನೆ ಬಾಗಿಲಿಗೆ ಸೌಲಭ್ಯಗಳನ್ನು ಬಿಜೆಪಿಯ ಕೇಂದ್ರ ಸರ್ಕಾರ ತಲುಪಿಸಿದೆ. ಇತರ ಯಾವ ಸರ್ಕಾರಗಳೂ ಇಂಥ ಕೆಲಸ ಮಾಡಿರಲಿಲ್ಲ. ರಾಜ್ಯದ ಕಾರ್ಯಕರ್ತರ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸಬೇಕಿದೆ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಲ ತುಂಬುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ, ಬಿಬಿಎಂಪಿ ಚುನಾವಣೆ, ವಿಧಾನಪರಿಷತ್ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದಕ್ಕೆ ಅಡಿ ಇಡಬೇಕು ಎಂದು ಸೂಚಿಸಿದರು