ಹಾಸನ : ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಡಿ ದೊರೆಯುವ ಎಲ್ಲಾ ಸೌಲಭ್ಯಗಳ ಬಗ್ಗೆ ವ್ಯಾಪಕವಾಗಿ ಪ್ರಚಾರ ನೀಡುವ ಮೂಲಕ ರೈತರಿಗೆ ಜಾಗೃತಿ ಮೂಡಿಸುವಂತೆ ಹಾಸನ ವಿಧಾನ ಸಭೆ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ತಾ. ಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಅವರು ಇತ್ತೀಚಿಗೆ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದ್ದು ಆರೋಗ್ಯ ಇಲಾಖೆ ಅವರು ಅದರ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೋರೋನಾ ವೈರಸ್ ತಡೆಗಟ್ಟಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕೋವಿಡ್ ತಡೆಗಟ್ಟಲು ಸಹಕರಿಸಬೇಕು ಎಂದು ತಿಳಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುತ್ತಿದ್ದಾರೆಯೆ ಹಾಗೂ ಅಲ್ಲಿನ ಸ್ವಚ್ಚತೆ, ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಬೇಕು. ಅಧಿಕಾರಿಗಳ ತಂಡದೊಂದಿಗೆ ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ಸ್ವಚ್ಚತೆ, ಶೌಚಾಲಯ ವ್ಯವಸ್ಥೆ, ಪೌಷ್ಠಿಕ ಆಹಾರ ಸೇರಿದಂತೆ ಮೂಲ ಭೂತಸೌಕರ್ಯಗಳ ಬಗ್ಗೆ ಪರಿಶೀಲಿಸುತ್ತೇನೆ ಎಂದರಲ್ಲದೆ ವಿದ್ಯಾರ್ಥಿಗಳ ಓದಿಗೆ ಯಾವುದೇ ತೊಂದರೆಯಾಗಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಮಾರ್ಚ್ ಅಂತ್ಯದೊಳಗೆ ಸರ್ಕಾರದ ಎಲ್ಲ ಯೋಜನೆಗಳು ಪ್ರತಿಯೊಬ್ಬರಿಗೂ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಚುರುಕಿನಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ಮುಂತಾದ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಮಾತನಾಡಿ, ರೇಷ್ಮೆ ಬೆಳೆಯಲ್ಲಿ ಉತ್ತಮ ಆದಾಯ ಗಳಿಸಬಹುದಾಗಿದ್ದು ನರೇಗಾ ಯೋಜನೆಯಡಿ ಸಿಗುವ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಹೆಚ್ಚಿನ ರೈತರು ರೇಷ್ಮೆ ಬೆಳೆ ಬೆಳೆಯುವ ಮೂಲಕ ಆರ್ಥಿಕವಾಗಿ ಸದೃಢರಾಗುವಂತೆ ಸಲಹೆ ನೀಡಿದರು.
ಪ್ರಸ್ತುತ ಬರಗಾಲದ ವೇಳೆಯಲ್ಲಿ ಜಾನುವಾರುಗಳಿಗೆ ಯಾವುದೇ ರೀತಿ ಮೇವಿನ ಕೊರತೆಯಾಗದಂತೆ ಮುಂಜಗ್ರಾತ ಕ್ರಮವಹಿಸಬೇಕು ಎಂದರಲ್ಲದೆ ಹಸುಗಳಿಂದ ಹಾಲು ಕರೆಯುವ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ರೈತರಲ್ಲಿ ಹೆಚ್ಚಿನ ಹಸು ಸಾಕಣೆ ಮಾಡಲು ಉತ್ತೇಜನ ನೀಡಿ ಎಂದು ಅವರು ಹೇಳಿದರು.
ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಬರುವ ಕೆರೆಗಳನ್ನು ಹರಾಜು ಹಾಕುವ ಮೂಲಕ ಕೆರೆಗಳಿಗೆ ಮೀನಿನ ಮರಿಗಳನ್ನು ಬಿಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿರುವ ಮಕ್ಕಳಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಬೇಕು ಅಪೌಷ್ಠಿಕತೆ, ಕಡಿಮೆ ತೂಕ ಇರುವಂತಹ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು ಎಂದು ಹೇಳಿದರು.