ಹುಬ್ಬಳ್ಳಿ : ಗ್ರಾಮೀಣ ಭಾಗದಲ್ಲಿ ಜನರು ಸರ್ಕಾರದ ಬಗ್ಗೆ ಹೆಚ್ಚು ಆಶಾ ಭಾವನೆಯನ್ನು ಹೊಂದಿದ್ದಾರೆ. ಅಧಿಕಾರಿಗಳು ಕ್ರೀಯಾಶೀಲ, ಆಸಕ್ತಿಯಿಂದ ಜನರಿಗೆ ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.
ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 3 ಲಕ್ಷ ಹೆಕ್ಟೇರ್ ವಿವಿಧ ಬೆಳೆ ಬಿತ್ತನೆಯಾಗಿದ್ದು, 2 ಲಕ್ಷ 11 ಸಾವಿರ ಹೆಕ್ಟೇರ್ ಸೋಯಾಬಿನ್, ಈರುಳ್ಳಿ, ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗಿವೆ. ಈ ಕುರಿತು ಸರ್ಕಾರಕ್ಕೆ ವರದಿ ತಯಾರಿಸಿ ಸಲ್ಲಿಸಲಾಗುತ್ತಿದೆ. ಅಲ್ಲದೇ ಸರ್ಕಾರಕ್ಕೆ ರೂ. 212 ಕೋಟಿ ಬೆಳೆ ಪರಿಹಾರ ಬೇಕು ಎಂದು ಮನವಿ ಸಲ್ಲಿಸಲಾಗಿದೆ. ಜಿಲ್ಲೆಗೆ ರೂ.12 ಕೋಟಿ ಬೆಳೆ ಪರಿಹಾರ ಘೋಷಣೆಯಾಗಿದೆ. ಮುಂದಿನ ಜೂನ್ ತಿಂಗಳವರೆಗೆ ಸುಮಾರು 3 ರಿಂದ 4 ಲಕ್ಷ ಟನ್ ಮೇವಿನ ಬೇಡಿಕೆಯಿದೆ. ಇಂದು ಬರ ಪರಿಸ್ಥಿತಿ ಪರಿಶೀಲನೆ ಸಂದರ್ಭದಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಸಹ ಮಳೆಯಾಗಬೇಕಿದೆ. ರೈತರು ಬೆಳೆದ ಬೆಳೆಗಳಿಗೆ ಮಳೆ ಅನುಕೂಲವಾಗಿದೆ ಎಂದರು.
ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ 10 ದಿನಗಳವರೆಗೆ ನೀರು
ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲೂಕಿನ 56 ಹಳ್ಳಿಗಳಿಗೆ ಕುಡಿಯುವ ನೀರನ್ನು ಮಲಪ್ರಭಾ ಜಲಾಶಯದ ಕಾಲುವೆ ಮೂಲಕ ತುಂಬಿಸಿಕೊಳ್ಳಬಹುದಾಗಿದೆ.
ನವೆಂಬರ್ 7 ರಿಂದ 10 ದಿನಗಳವರೆಗೆ ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಕೆರೆಗಳಿಗೆ ನೀರು ತುಂಬಿಸಿಕೊಳ್ಳಬಹುದಾಗಿದೆ. ಇಲ್ಲಿಯವರೆಗೆ ಯಾವುದೇ ಹಳ್ಳಿಗೆ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿಲ್ಲ. ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಇಲ್ಲದಿರುವುದರ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಿದೆ. ಸಹಾಯವಾಣಿ ಸಂಖ್ಯೆಗೆ ಬರುವ ಸಮಸ್ಯೆಗಳನ್ನು ಸರಿಯಾಗಿ ನಿಭಾಯಿಸಬೇಕು. ಜಲಜೀವನ್ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ನವೆಂಬರ್ 18 ರಂದು ಧಾರವಾಡದಲ್ಲಿ ಅಧಿಕಾರಿಗಳ ಸಭೆ
ನವೆಂಬರ್ 18 ರಂದು ಧಾರವಾಡದಲ್ಲಿ ತಹಸೀಲ್ದಾರರು, ಅಧಿಕಾರಿಗಳು, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರ ಸಭೆ ಕರೆಯಲಾಗಿದೆ. ನವೆಂಬರ್ 18 ರೊಳಗೆ ತಹಸೀಲ್ದಾರರು, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ನರೇಗಾ, ವಿದ್ಯುತ್, ಕುಡಿಯುವ ನೀರು, ಮೇವು ಕೊರತೆ ಸಮಸ್ಯೆಗಳ ಬಗ್ಗೆ ವರದಿ ಸಂಗ್ರಹಿಸಿಕೊಂಡು ಸಭೆಗೆ ಹಾಜರಾಗಬೇಕು. ಅಲ್ಲದೇ ಗ್ರಾಮ ಪಂಚಾಯತಗಳಿಗೆ ಭೇಟಿ ನೀಡಿದ ಬಗ್ಗೆ ಫೋಟೋ ಹಾಗೂ ಮಾಹಿತಿಯನ್ನು ಸಹ ಒದಗಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ನಾಳೆಯಿಂದ ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುವುದು. ಕೆರೆಗಳಿಗೆ ನೀರು ತುಂಬಿಸಿಕೊಳ್ಳಿ. ಇಲ್ಲಿಯವರೆಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿರುವುದಿಲ್ಲ. ಒಂದು ವೇಳೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಒದಗಿಸಲಾಗುವುದು. ಇಲ್ಲಿಯವರೆಗೆ ಮೇವಿನ ಕೊರತೆ ಸಹ ಆಗಿರುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಡಿಸಿಪಿಗಳಾದ ರವೀಶ್ ಸಿ.ಆರ್, ರಾಜೀವ್ ಎಂ., ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ, ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರರಾದ ಪ್ರಕಾಶ ನಾಶಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.