ಬೆಂಗಳೂರು: ಸರ್ಕಾರದ ಪರ್ಯಾಯ ವ್ಯವಸ್ಥೆಯ ಬೆದರಿಕೆ ಅಸ್ತ್ರಕ್ಕೆ ಜಗ್ಗದ ರಾಜ್ಯ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆಗಳು ಸೇವೆ ಕಾಯಂಗೆ ಆಗ್ರಹಿಸಿ ನಿಗದಿಯಂತೆ ಸೋಮವಾರ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸುವುದಾಗಿ ತಿಳಿಸಿವೆ.
ಹೌದ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಲು ಸೂಕ್ತ ಯೋಜನೆ ರೂಪಿಸುವುದಾಗಿ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ನಾವು ಸರ್ಕಾರಕ್ಕೆ ಕೇಳುತ್ತಿದ್ದೇವೆ. ಹತ್ತು ಹದಿನೈದು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಭದ್ರತೆ ಕೊಡಿ ಎಂದು ಕೇಳುವುದು ನಮ್ಮ ಹಕ್ಕು.
ಅದಕ್ಕಾಗಿ ಕಳೆದ ಒಂದು 39 ದಿನಗಳಿಂದ ತರಗತಿ ಬಹಿಷ್ಕರಿಸಿ ನಾವು ಮುಷ್ಕರ ನಡೆಸುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಸ್ಪಂದಿಸಿಲ್ಲ. ಹಾಗಾಗಿ ಪಾದಯಾತ್ರೆ ಮೂಲಕ ಹೋರಾಟ ತೀವ್ರಗೊಳಿಸಲು ನಾವು ತೀರ್ಮಾನಿಸಿದ್ದೇವೆ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ತಿಳಿಸಿದ್ದಾರೆ.