ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಎಲ್ಲ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದಾರೆ. ಇವರು 2018 ರಲ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ನೀಡಿದ್ದರು. ಇದೀಗ ಏಕದಿನ ಮತ್ತು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ತಮ್ಮ 18 ವರ್ಷಗಳ ಕ್ರಿಕೆಟ್ ಬದುಕಿಗೆ ಅಂತ್ಯ ಹಾಡಿದ್ದಾರೆ.
ಆಲ್ರೌಂಡರ್ ಆಗಿರುವ ಹಫೀಜ್ ಪಾಕಿಸ್ತಾನ ಪರ 392 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. 12,789 ರನ್ ಬಾರಿಸಿದ್ದು 253 ವಿಕೆಟ್ ಕಬಳಿಸಿದ್ದಾರೆ. ಒಟ್ಟು 55 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 218 ಏಕದಿನ ಮತ್ತು 117 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಇವರು ಪಾಕ್ ಪರ ಮೂರು ಐಸಿಸಿ ಏಕದಿನ ವಿಶ್ವಕಪ್ ಮತ್ತು ಆರು ಟಿ20 ವಿಶ್ವಕಪ್ ಅನ್ನು ಪ್ರತಿನಿಧಿಸಿದ್ದರು.
