ಮಂಗಳೂರು:- ಇಲ್ಲಿ ಭಾನುವಾರ ನಡೆದ ಬೃಹತ್ ರೋಡ್ ಶೋ ನಲ್ಲಿ ಕಿಕ್ಕಿರಿದು ಸೇರಿದ್ದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೃತಜ್ಞತೆ ತಿಳಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿಯವರು, ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ
ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ ನಮ್ಮನ್ನು ವರ್ಷಗಳಿಂದ ಆಶೀರ್ವದಿಸಿದ್ದಾರೆ ಎಂದು ಹೇಳಿದ್ದಾರೆ.
ಮತಬ್ಯಾಂಕ್ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್ ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದ್ದು, ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.